ADVERTISEMENT

ಇಂದು ಕೆಡಿಪಿ ಸಭೆ: ಸ್ಪಷ್ಟ ಮಾಹಿತಿ ಒದಗಿಸಲು ಸೂಚನೆ

ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಿ: ಮಹಾದೇವ

​ಪ್ರಜಾವಾಣಿ ವಾರ್ತೆ
Published 8 ಮೇ 2017, 4:10 IST
Last Updated 8 ಮೇ 2017, 4:10 IST
ಬೀದರ್‌: ‘ಮೇ 8ರಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗೆ (ಕೆಡಿಪಿ) ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಮಾಹಿತಿ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಸೂಚನೆ ನೀಡಿದರು.
 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 
 
‘ಕುಡಿಯುವ ನೀರಿನ ಸಮಸ್ಯೆಯ ಕುರಿತು ಪರಿಶೀಲಿಸಿದ ಅವರು, ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಸ್ಥಳಕ್ಕೆ ಧಾವಿಸಿ ಅಗತ್ಯ ಪರಿಹಾರ ಕಲ್ಪಿಸಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗೆ ಸೂಚಿಸಿದರು.
 
‘ನೀರಿನ ಸಮಸ್ಯೆ ಇರುವ ಕಡೆ ತಕ್ಷಣ ಕೊಳವೆಬಾವಿ ಕೊರೆಸಬೇಕು ಅಥವಾ ಇರುವ ಕೊಳವೆಬಾವಿಯನ್ನು ದುರಸ್ತಿಗೊಳಿಸಿ ಕುಡಿಯುವ ನೀರು ಒದಗಿಸಬೇಕು’ ಎಂದು ತಿಳಿಸಿದರು.
 
‘ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಬೇಕು.

ಅನುದಾನದ ಕೊರತೆಯಿದೆ ಎನ್ನುವ ಯಾವುದೇ ಸಬೂಬು ಹೇಳದೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜನೆ ಹಾಕಿಕೊಳ್ಳಬೇಕು’ ಎಂದು ಹೇಳಿದರು. 
‘ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ಕಲ್ಪಿಸುವುದು, ಬೆಳೆ ಹಾನಿ ಪರಿಹಾರಕ್ಕಾಗಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ತಲುಪಿಸುವಂತೆ ಮುತುವರ್ಜಿ ವಹಿಸಬೇಕು. ಬೆಳೆ ವಿಮೆಗೆ ಮತ್ತಷ್ಟು ಬಿಡುಗಡೆಯಾದ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು’ ಎಂದು ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
 
‘ಕೋಟಿ ವೃಕ್ಷ ಆಂದೋಲನದಡಿ ಜಿಲ್ಲೆಯಲ್ಲಿ ನೆಡಲಾದ ಗಿಡಗಳ ಪಾಲನೆ ಪೋಷಣೆ ನಡೆದಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಬೇಕು. ಆಯಾ ಇಲಾಖೆ ಅಧಿಕಾರಿಗಳು ತಮ್ಮ ಹೊಣೆಯನ್ನು ಅರಿತು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನ ಹಾಗೂ ಬಳಕೆಯಾದ ಅನುದಾನಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ನೀಡಬೇಕು.

ಯೋಜನೆ ಅನುಷ್ಠಾನಗೊಳಿಸುವ ವಿಷಯದಲ್ಲಿ ಸಮಸ್ಯೆ ಎದುರಾದರೆ ನನ್ನ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.
 
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆರ್. ಸೆಲ್ವಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಡಿ. ಷಣ್ಮುಖ, ಉಪವಿಭಾಗಾಧಿಕಾರಿಗಳಾದ ಶಿವಕುಮಾರ ಶೀಲವಂತ, ಶರಣಬಸಪ್ಪ ಕೊಟ್ಟಪ್ಪಗೋಳ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.