ADVERTISEMENT

ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 5:29 IST
Last Updated 30 ಅಕ್ಟೋಬರ್ 2017, 5:29 IST

ಬೀದರ್‌: ‘ಕಲಬುರ್ಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸಲು ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವರಾಗಿದ್ದಾಗ ಕೈಗೊಂಡ ನಿರ್ಧಾರದ ಬಗೆಗೆ ನನಗೆ ಮಾಹಿತಿ ಇಲ್ಲ. ವಿಭಾಗೀಯ ಕಚೇರಿ ಸ್ಥಾಪನೆಯ ಪ್ರಸ್ತಾವ ಪರಿಶೀಲಿಸಲಾಗುವುದು’ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದರು.

‘ಬೀದರ್‌–ಕಲಬುರ್ಗಿ ರೈಲು ಮಾರ್ಗ ನಿರ್ಮಾಣ ವಿಳಂಬದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಇತ್ತೀಚಿನ ನಾಲ್ಕು ವರ್ಷಗಳ ಅವಧಿಯಲ್ಲಿಯೇ ಕಾಮಗಾರಿ ವೇಗ ಪಡೆದುಕೊಂಡಿತು. ಇದಕ್ಕಾಗಿ ರೈಲ್ವೆ ಇಲಾಖೆ ₹ 374 ಕೋಟಿ ವಿನಿಯೋಗಿಸಿದೆ’ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘1998–99ರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದರು’ ಎಂದರು.

ADVERTISEMENT

‘2017ರ ಫೆಬ್ರುವರಿಯಲ್ಲಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರ ಮಾಡಲಾಗಿದೆ. ಕಡಿಮೆ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಭಾಗದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೊಸ ರೈಲು ಮಾರ್ಗದಿಂದ ಅನುಕೂಲವಾಗಲಿದೆ. ಕೃಷಿ ಹಾಗೂ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜನ ದೊರೆಯಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.