ADVERTISEMENT

ಶಾಶ್ವತ ನೀರಾವರಿ ಯೋಜನೆಗೆ ಆಗ್ರಹ

ಪ್ರತಿಭಟನೆ ಮೂಲಕ ರೈತ ಹುತಾತ್ಮ ದಿನಾಚರಣೆ; ಸರ್ಕಾರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಜುಲೈ 2017, 6:18 IST
Last Updated 22 ಜುಲೈ 2017, 6:18 IST

ಬಾಗೇಪಲ್ಲಿ: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದು, ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ‘ಸತತ ಬರಗಾಲದಿಂದಾಗಿ ಜನರು ಜೀವನೋಪಾಯಕ್ಕಾಗಿ ಗುಳೆ ಹೋಗುತ್ತಿದ್ದಾರೆ, ಜಾನುವಾರುಗಳಿಗೆ ಮೇವು, ನೀರಿನ ಅಭಾವದಿಂದ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಿ, ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಲ್ಲೂಕಿನಾದ್ಯಂತ ರೈತರು, ಕೂಲಿಕಾರ್ಮಿಕರು, ದಲಿತರು ಸಾಲದ ಹೊರೆಯಿಂದ ಬೇಸತ್ತು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸರ್ಕಾರ ರೈತರ ಸಂಕಷ್ಟ ಪರಿಹಾರಕ್ಕೆ ಕನಿಷ್ಠ ಅಸಕ್ತಿಯನ್ನೂ ತೋರುತ್ತಿಲ್ಲ.

ಇದೇ ಸ್ಥಿತಿ ಮುಂದುವರಿದರೆ ರೈತರು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಆಗಲಿದೆ ಎಂದರು.

ಬಯಲುಸೀಮೆ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಬೈಕ್‌ ರ್‍ಯಾಲಿ ನಡೆಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಅದಾಗ್ಯೂ ಸರ್ಕಾರ ಯೋಜನೆ ತುರ್ತು ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದರಿಂದಾಗಿ ರೈತರಿಗೆ ತೊಂದರೆಯಾಗಿದೆ ಎಂದು ದೂರಿದರು.

ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಮನವಿ ಸ್ವೀಕರಿಸಿದರು. ಮುಖಂಡರಾದ ತಿಪ್ಪಣ್ಣ, ಅನಸೂಯಮ್ಮ, ರಾಮಚಂದ್ರಮ್ಮ, ಲಕ್ಷ್ಮೀದೇವಮ್ಮ, ಗಂಗಿರೆಡ್ಡಿ, ವೆಂಕಟೇಶ, ಲಕ್ಷ್ಮೀನರಸಪ್ಪ, ನಂಜುಂಡಪ್ಪ, ವೆಂಕಟರವಣಪ್ಪ ಭಾಗವಹಿಸಿದ್ದರು.

ತಹಶೀಲ್ದಾರ್‌ಗೆ ಮನವಿ
ಗೌರಿಬಿದನೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಆರ್. ಲಕ್ಷ್ಮೀನಾರಾಯಣ ಮಾತನಾಡಿ, ‘ಬಯಲು ಸೀಮೆ ಜಿಲ್ಲೆಗಳ ರೈತರು 12 ವರ್ಷಗಳಿಂದ ಸತತ ಬರಗಾಲಕ್ಕೆ ತುತ್ತಾಗಿ ಜೀವನ ನಿರ್ವಹಣೆ ಸಮಸ್ಯೆಯಾಗಿದೆ. ಸರಣಿ ಆತ್ಮಹತ್ಯೆಗಳಿಂದ ಆತಂಕದ ಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಆಳುವ ಸರ್ಕಾರಗಳು ಬಹುರಾಷ್ಟ್ರೀಯ ಕಂಪೆನಿಗಳ ಕೈಗೊಂಬೆಗಳಾಗಿ ವರ್ತಿಸುವ ಮೂಲಕ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಬಹುತೇಕ ರೈತರು ಕೃಷಿಯನ್ನು ಸಂಪೂರ್ಣವಾಗಿ ತೊರೆದು ಕೆಲಸಕ್ಕಾಗಿ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ.

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ರೈತರ ಎಲ್ಲ ರೀತಿಯ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಲೋಕೇಶ್ ಗೌಡ, ಮುಖಂಡರಾದ ಸನತ್ ಕುಮಾರ್, ಮುದ್ದರಂಗಪ್ಪ, ಲಕ್ಷ್ಮೀ ನಾರಾಯಣ, ಹಿರೇಬಿದನೂರು ರಾಜಣ್ಣ, ವೆಂಕಟೇಶ್, ಆದಿನಾರಾಯಣಪ್ಪ, ರುದ್ರೇಶ ಬಾಬು, ದಿನೇಶ್ ಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.