ADVERTISEMENT

‘ಅಲೆಮಾರಿಗಳಿಗೆ ಬದುಕು ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2017, 5:25 IST
Last Updated 8 ನವೆಂಬರ್ 2017, 5:25 IST

ಬಾಗಲಕೋಟೆ: ಅಲೆಮಾರಿಗಳಿಗೆ ಶೇ 10ರಷ್ಟು ಮೀಸಲಾತಿ ಸವಲತ್ತು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನವೆಂಬರ್ 12ರಂದು ಕೂಡಲಸಂಗಮದಲ್ಲಿ ಗೋಂಧಳಿ ಸಮಾಜದ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ.ಭೋಸಲೆ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಗೋಂಧಳಿ ಸಮಾಜದ 50 ಸಾವಿರಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ರಾಜ್ಯದಲ್ಲಿ ಆರು ಲಕ್ಷ ಗೋಂಧಳಿಗರು ಇದ್ದರೂ ಇಲ್ಲಿಯವರೆಗೆ ಗ್ರಾಮ ಪಂಚಾಯ್ತಿ ಸದಸ್ಯತ್ವದ ಪ್ರಾತಿನಿಧ್ಯವೂ ಸಿಕ್ಕಿಲ್ಲ. ಅಲೆಮಾರಿಗಳಾದ ಕಾರಣಕ್ಕೆ ಸರ್ಕಾರದಿಂದ ಸಂಪೂರ್ಣ ನಿರ್ಲಕ್ಷ್ಯಗೋಕ್ಕೆ ಒಳಗಾಗಿದ್ದೇವೆ. ಸ್ಥಳೀಯ ಸಂಸ್ಥೆಗಳಲ್ಲಿ ಇಲ್ಲವೇ ಸರ್ಕಾರದ ನಿಗಮ ಮಂಡಳಿಗಳಲ್ಲಾಗಲಿ ಒಬ್ಬರಿಗೂ ಅವಕಾಶ ದೊರೆತಿಲ್ಲ. ಹೀಗೆ ಅವಕಾಶ ವಂಚಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.

ADVERTISEMENT

ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1ರಲ್ಲಿ ಇರುವ ಶೈಕ್ಷಣಿಕ ಸೌಲಭ್ಯಗಳನ್ನು ಅಲೆಮಾರಿಗಳಿಗೆ ನಿರಾಕರಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದಾಗ ಪುನರ್‌ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ ಅದಿನ್ನೂ ಕಾರ್ಯಗತಗೊಂಡಿಲ್ಲ. ಅದರ ಬಗ್ಗೆಯೂ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಗೋಂಧಳಿಗರಿಗೆ ಸರ್ಕಾರದ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡಬೇಕು. ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಎರಡು ಎಕರೆ ನಿವೇಶನ ಗುರುತಿಸಿ ಅವರು ಒಂದೇ ಕಡೆ ನೆಲೆಯೂರುವಂತೆ ಅವಕಾಶ ಒದಗಿಸಿಕೊಡಬೇಕು. ಜನಾಂಗದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು. ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗಕ್ಕೆ ಧನ ಸಹಾಯ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸುಭಾಷ್ ಗಾಯಕವಾಡ, ರವಿ ಜೋಗಿ, ಮಾರುತಿ ಜೋಶಿ, ಅಂಬಾಜಿ ಜೋಶಿ, ಮುರಳಿ ಸೂರ್ಯವಂಶಿ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.