ADVERTISEMENT

‘ಕಾನೂನು ಪರಿಣಾಮಕಾರಿ ಜಾರಿಗೆ ಅರಿವು ಅಗತ್ಯ’

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2017, 7:18 IST
Last Updated 4 ಮಾರ್ಚ್ 2017, 7:18 IST

ಬಾಗಲಕೋಟೆ:  ಸರ್ಕಾರ ಜಾರಿಗೆ ತಂದಿರುವ ಕಾನೂನು ಅನುಷ್ಠಾನಗೊಳಿಸುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಅವುಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಬ್ದುಲ್‌ ರಹೀಂ ಹುಸೇನ್ ಶೇಖ್ ಹೇಳಿದರು.

ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ ಮಕ್ಕಳ ಮೇಲಿನ ದೌರ್ಜನ್ಯ ಕುರಿತಾದ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗಗಳ ಪಾತ್ರ ದೊಡ್ಡದು. ಇದರಲ್ಲಿ ಒಂದು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಏರುಪೇರಾಗುತ್ತದೆ. ಆದ್ದರಿಂದ ಎಲ್ಲ ಅಂಗಗಳ ಪಾತ್ರ ಮಹತ್ವವಾಗಿದೆ ಎಂದರು.

ಬಾಲ್ಯ ವಿವಾಹ ತಡೆಯಲು ಸರ್ಕಾರ ಬಾಲ್ಯವಿವಾಹ ನಿಷೇಧ ಕಾಯ್ಕೆ ಜಾರಿಗೆ ತಂದಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಬಾಲ್ಯ ವಿವಾಹ ತಡೆಗಟ್ಟಲು ಅಧಿಕಾರಿಗಳು ಶ್ರಮಿಸಬೇಕು. ಸಾಮೂಹಿಕ ವಿವಾಹಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ತಡೆಗಟ್ಟಲು ಕ್ರಮಕೈಗೊಳ್ಳಬೇಕು. ತಮಗೆ ಮಾಹಿತಿ ತಿಳಿಯದಿದ್ದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ತೋರವಿ ಮಾತನಾಡಿ, ಬಾಲ್ಯವಿವಾಹ ಮಾಡಿಕೊಳ್ಳುವವರ ಸಂಖ್ಯೆಯಲ್ಲಿ ಜಿಲ್ಲೆ 3ನೇ ಸ್ಥಾನದಲ್ಲಿದ್ದು, ಸಂಪೂರ್ಣ ತಡೆಗೆ ಕ್ರಮವಹಿಸಬೇಕು. ತಡೆಗಟ್ಟುವ ಕುರಿತು ಹೋಬಳಿ ಮಟ್ಟದಲ್ಲಿ ಜಾಗೃತಿ ಮೂಡಿಸು ಕಾರ್ಯ ನಡೆಯಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸಿಇಓ ವಿಕಾಸ ಸುರಳಕರ, ಹರಿಶ್ ಜೋಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಅಶೋಕ ಕೆಲವಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ,ಜಿಲ್ಲಾ  ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಫಾದರ್ ಪೀಟರ್ ಆಶೀರ್ವಾದ, ಡಿಡಿಪಿಐ ಕೆ.ಎಸ್.ಕರಿಚ್ಚಣವರ ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಮೇಶ ಎನ್.ತಳವಾರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.