ADVERTISEMENT

ಬಸ್ ಸೌಲಭ್ಯಕ್ಕೆ ಆಗ್ರಹ:ಪ್ರತಿಭಟನೆ

ರಾಜ್ಯ ಸರ್ಕಾರ, ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2017, 8:45 IST
Last Updated 7 ಸೆಪ್ಟೆಂಬರ್ 2017, 8:45 IST

ಬಾಗಲಕೋಟೆ: ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಶಿವಾನಂದ ಜಿನ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿನಿತ್ಯ ನಗರಕ್ಕೆ ನೂರಾರು ಜನ ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಬರುತ್ತಾರೆ. ಶೇ. 70ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನೇ ಅವಲಂಬಿಸಿದ್ದಾರೆ. ಅವರಿಗೆ ಸರಿಯಾದ ಬಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಶಾಲಾ–ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕಳೆದ ಎರಡು–ಮೂರು ವರ್ಷಗಳಿಂದ ಸಂಘಟನೆ ಮೂಲಕ ಪ್ರತಿಭಟನೆ ನಡೆಸಿದರೂ ಸಂಬಂಧಿಸಿದ ಇಲಾಖೆ ಮಾತ್ರ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.

ಕಾಲೇಜು ಸಮಯಕ್ಕೆ ಬರುವ ಕೆಲ ಬಸ್‌ಗಳು ಭರ್ತಿಯಾಗಿರುತ್ತವೆ. ಈ ಸಂದರ್ಭದಲ್ಲಿ ಬಸ್ ನಿಲ್ಲಿಸದೇ ಹಾಗೇ ಹೋಗುತ್ತವೆ. ಇದರಿಂದ ಸರಿಯಾದ ಸಮಯಕ್ಕೆ ತೆರಳಲು ತೊಂದರೆಯಾಗುತ್ತಿದೆ. ಸರಿಯಾದ ಬಸ್ ಸೌಲಭ್ಯವಿಲ್ಲದೇ ಪರದಾಡುವ ಪರಿಸ್ಥಿತಿ ಇದೆ.

ಕೂಡಲೇ ಸರಿಯಾದ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು. ಈ ವೇಳೆ ಸಂಘಟನೆಯ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.