ADVERTISEMENT

‘ಮಕ್ಕಳಿಗೆ ನಾಯಕತ್ವ ಶಿಬಿರ ಅವಶ್ಯ’

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2017, 5:30 IST
Last Updated 2 ಮಾರ್ಚ್ 2017, 5:30 IST

ಬಾಗಲಕೋಟೆ:  ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸುಗಳಿಸ ಬೇಕಾದರೆ ನಾಯಕತ್ವ ಶಿಬಿರಗಳು ಅವಶ್ಯಕವಾಗಿವೆ’ ಎಂದು ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಲಿನ್ ತಿಳಿಸಿದರು.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನವನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವೈದ್ಯರು, ಎಂಜಿನಿಯರ್, ಪೈಲಟ್, ಐಎಎಸ್, ಕೆಎಎಸ್ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ಸಾಧಕರ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೇತೃತ್ವ ವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡುವಂತೆ ತಿಳಿಸಿದರು.

ನಾಯಕತ್ವ ಶಿಬಿರದಲ್ಲಿ ಬೆಳಗಾವಿ ವಿಭಾಗ ಮಟ್ಟದ 9 ವಸತಿ ಶಾಲೆಗಳಲ್ಲಿ 9ನೇ ತರಗತಿಯ ಒಟ್ಟು 99 ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ ಕಟೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕಾಸ್ ಸುರಳಕರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎನ್.ಮೇಲಿನಮನಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಾನಂದ ಕುಂಬಾರ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.