ADVERTISEMENT

‘ಶಾಲೆಯಲ್ಲಿ ಶೌಚಾಲಯಕ್ಕೆ ಬೀಗ ಹಾಕದಿರಿ’

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2017, 10:49 IST
Last Updated 21 ಡಿಸೆಂಬರ್ 2017, 10:49 IST

ಕೂಡ್ಲಿಗಿ:‘ಶಾಲೆಗಳಲ್ಲಿ ಶೌಚಾಲಯಗಳಿದ್ದರೂ, ಅವುಗಳನ್ನು ಮಕ್ಕಳ ಬಳಕೆಗೆ ನೀಡದೇ ಇರುವುದು ಸರಿಯಲ್ಲ’ ಎಂದು ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷೆ ಪಿ.ದೀನಾ ಅಸಮಾಧಾನ ವ್ಯಕ್ತಪಡಿಸಿದರು.

ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲ ಸೌಕರ್ಯ ಹಾಗೂ ಫಲಿತಾಂಶ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ ಶಾಲೆಗಳಲ್ಲಿರುವ ಶೌಚಾಲಯವನ್ನು ಬಳಸಲು ಎಲ್ಲ ವಿದ್ಯಾರ್ಥಿಗಳಿಗೂ ಅನುವು ಮಾಡಬೇಕು’ ಎಂದು ಸೂಚಿಸಿದರು.

‘ಪ್ರತಿ ಶಾಲೆಯಲ್ಲೂ ನೀರು ಶುದ್ಧೀಕರಿಸುವ ಯಂತ್ರಗಳನ್ನು ಅಳವಡಿಸಿಕೊಳ್ಳಬೇಕು. ಅದಕ್ಕೆ ಶಾಲಾಭಿವೃದ್ಧಿ ಅನುದಾನ ಬಳಸಬೇಕು’ ಎಂದರು. ಅದಕ್ಕೆ ಅವಕಾಶವಿಲ್ಲ ಎಂದು ಕೆಲವು ಶಿಕ್ಷಕರು ತಿಳಿಸಿದ ಬಳಿಕ ಅವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಪರ್ಯಾಯ ಅನುದಾನ ಒದಗಿಸಲಾಗುವುದು ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದ ವರದಿ ಓದಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಸೌಭಾಗ್ಯ, ಎಸ್. ವೆಂಕಟೇಶ್ ಹಾಗೂ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ. ವೆಂಕಟೇಶ್ ನಾಯ್ಕ್ ವೇದಿಕೆಯಲ್ಲಿದ್ದರು. ತಾಲ್ಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.