ADVERTISEMENT

ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆ

ಪರಿಹಾರವಾಗದ ಪದವಿ ಪೂರ್ವ ಕಾಲೇಜು ಅಧ್ಯಾಪಕರ ವೇತನ ತಾರತಮ್ಯ

​ಪ್ರಜಾವಾಣಿ ವಾರ್ತೆ
Published 2 ಜನವರಿ 2017, 11:47 IST
Last Updated 2 ಜನವರಿ 2017, 11:47 IST

ದೊಡ್ಡಬಳ್ಳಾಪುರ: ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ  ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವೇತನ ತಾರತಮ್ಯ ಮತ್ತು  ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರಕ್ಕೆ ಶನಿವಾರ ಮನವಿ ಸಲ್ಲಿಸಿದರು. 

ತಾಲ್ಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದ ನಂತರ ಮಾತನಾಡಿದ  ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಎರಡು ದಶಕಗಳಿಂದ ರಾಜ್ಯದ ಪದವಿ ಪೂರ್ವ ಕಾಲೇಜುಗಳ  ಪ್ರಾಂಶುಪಾಲರ ಮತ್ತು ಉಪನ್ಯಾಸಕರ  ವೇತನ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಇನ್ನು ವೇತನ ತಾರತಮ್ಯ ನಿವಾರಣೆ ಮಾಡಿಲ್ಲ. ಕುಮಾರನಾಯಕ್ ವರದಿಯನ್ನು ಜಾರಿ ಮಾಡಿಲ್ಲ.  ಇದಕ್ಕಾಗಿ ಕಳೆದ ವರ್ಷದಂತೆ ಈ ಬಾರಿಯೂ ಹೋರಾಟ ಮಾಡಬೇಕಾಗಿರುವುದು ಅನಿವಾರ್ಯವಾಗಿದೆ ಎಂದರು.

ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆಗಾಗಿ ಕಳೆದ ಕೆಲವು ವರ್ಷಗಳ ಹಿಂದೆ   ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  ಪ್ರಧಾನ ಕಾರ್ಯದರ್ಶಿ ಆಗಿದ್ದ ಕುಮಾರನಾಯಕ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಸದರಿ ಸಮಿತಿ ಮೂರು ವರ್ಷಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯಲ್ಲಿ  ಬೇರೆ ಬೇರೆ ರಾಜ್ಯಗಳಲ್ಲಿರುವ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ಶ್ರೇಣಿಯನ್ನು ಪ್ರಸ್ತಾಪಿಸಲಾಗಿದೆ. ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇತನ ತಾರತಮ್ಯ ನಿವಾರಣೆ ಮಾಡುವುದಾಗಿ, ಕುಮಾರನಾಯಕ್ ವರದಿಯನ್ನು ಜಾರಿಗೆ ತರುವುದಾಗಿ ಹಲವು ಬಾರಿ ಆಶ್ವಾಸನೆಗಳನ್ನು ನೀಡಿದ್ದಾರೆ. ಆದರೆ ಅದು  ಕಾರ್ಯರೂಪಕ್ಕೆ ಬಂದಿಲ್ಲ ಎಂದು  ದೂರಿದರು. 


ಕಪ್ಪು ಪಟ್ಟಿ: ಕುಮಾರ ನಾಯಕ್‌ ಅವರ ವರದಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಈ ವರ್ಷ ನಡೆಯಲಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕಪ್ಪು ಪಟ್ಟಿ ಧರಿಸುವುದರ ಮೂಲಕ ನಮ್ಮ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಸಕಾಲದಲ್ಲಿ ಈಡೇರಿಸದಿದ್ದರೆ  2017ನೇ  ಫೆಬ್ರುವರಿಯಲ್ಲಿ ನಡೆಯುವ ಪ್ರಥಮ ಪಿಯುಸಿ ಮತ್ತು ಮಾರ್ಚ್‌ನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗುತ್ತದೆ. ಏಪ್ರಿಲ್‌ನಲ್ಲಿ ನಡೆಯುವ ದ್ವಿತೀಯ ಪಿಯುಸಿ ಮೌಲ್ಯ ಮಾಪನವನ್ನು ಬಹಿಷ್ಕರಿಸುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸರ್ಕಾರಕ್ಕೆ ಮನವಿ ನೀಡುವ ಸಂದರ್ಭ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಲಾವತಿ, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಎನ್. ಬಾಬು,  ವಿವಿಧ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.