ADVERTISEMENT

ಸರ್ಕಾರಿ ಶಾಲೆ ಬಲವರ್ಧನೆಗೆ ಶ್ರಮಿಸಿ

45 ಸಾವಿರ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಸ್ಥಾಪನೆ – ಉನ್ನತೀಕರಣ ಸಮಾವೇಶ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 10:55 IST
Last Updated 15 ಮಾರ್ಚ್ 2018, 10:55 IST
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಸಮಾವೇಶ ಉದ್ಘಾಟಿಸಿದರು
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಸಮಾವೇಶ ಉದ್ಘಾಟಿಸಿದರು   

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ರಾಜ್ಯದ 45 ಸಾವಿರ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಸಮುದಾಯದ ಸಹಕಾರದೊಂದಿಗೆ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಆಂದೋಲನ ಹಮ್ಮಿಕೊಳ್ಳ
ಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು.

ನಗರದ ಅನಿಬೆಸೆಂಟ್ ಪಾರ್ಕ್ ಸಭಾಂಗಣದಲ್ಲಿ ಬುಧವಾರ ನಡೆದ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಹಳೆಯ ವಿದ್ಯಾರ್ಥಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದ ಮಹತ್ವ ಕುರಿತು ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಕಡ್ಡಾಯ. ಶಿಕ್ಷಣ ವಂಚಿತ ಮಕ್ಕಳು ಬಾಲಕಾರ್ಮಿಕರಾಗಲಿದ್ದಾರೆ. ಬಾಲ್ಯವಿವಾಹ, ಲೈಂಗಿಕ ದೌರ್ಜನನ್ಯಕ್ಕೆ ಒಳಗಾಗುವ ಸಂಭವವಿದೆ. ಇಲ್ಲವೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡು ಸಮಾಜ ಘಾತುಕರಾಗುವ ಅಪಾಯವಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣ ಅಗತ್ಯವಾಗಿದ್ದು, ಅದರಿಂದ ವಂಚಿತರಾದರೆ ಅದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದರು.

ADVERTISEMENT

ರಾಜ್ಯ ಸರ್ಕಾರ ಈ ಹಿಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಮೀಸಲಿಟ್ಟ ₹17,000 ಕೋಟಿಗಳಲ್ಲಿ ₹14 ಸಾವಿರ ಕೋಟಿ ವೇತನಕ್ಕೆ  ಖರ್ಚಾಗುತ್ತಿತ್ತು. ಆದರೆ, ಈ ಸಾಲಿನ ಬಜೆಟ್‌ನಲ್ಲಿ ₹23 ಸಾವಿರ ಕೋಟಿ ಶಿಕ್ಷಣಕ್ಕೆ ಮೀಸಲಿಟ್ಟಿರುವುದು ಉತ್ತಮ ಬೆಳವಣಿಗೆ. ಇದರೊಂದಿಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಏನನ್ನಾದರೂ ನೀಡುವ ಮೂಲಕ ಋಣ ತೀರಿಸಬೇಕು. ಮಕ್ಕಳ ಭವಿಷ್ಯದೊಂದಿಗೆ ಉತ್ತಮ ಸಮಾಜ ನಿರ್ಮಾಣ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಉನ್ನತ ಹುದ್ದೆ ಅಲಂಕರಿಸಿರುವವರೆಲ್ಲರೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ ಆಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ ನೀಡುವಲ್ಲಿ ಸಮುದಾಯದ ಸಹಕಾರ ಬೇಕಿದೆ ಎಂದರು.

ಸರ್ಕಾರಿ ಶಾಲೆಗಳಿಗೆ ಉದಾರವಾಗಿ ನೆರವು ನೀಡಿದ ಹಳೆಯವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀವತ್ಸ, ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಮರಿಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಗಾಯತ್ರಿದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಮಹೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ಹೊಸಕೋಟೆ ಬಿಇಒ ಅಣ್ಣಯ್ಯ, ಸಿಡಿಪಿಒ ಜಯಲಕ್ಷ್ಮೀ ಇದ್ದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಹಳೆ ನೆನಪು ಮೆಲುಕು ಹಾಕಿದ ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ ಎಸ್.ಪಾಲಯ್ಯ ಮಾತನಾಡಿ, ‘ಈ ಹಿಂದೆ ಶಿಕ್ಷಣ ಪಡೆಯಲು ಕಷ್ಟಕರ ವಾತಾವರಣ ಇತ್ತು. ಕಾಲ್ನಡಿಗೆಯಲ್ಲಿ 8 ಕಿ.ಮೀ. ನಡೆದು ಪ್ರೌಢಶಾಲೆ ವಿದ್ಯಾಭ್ಯಾಸ ಮಾಡಿದೆ. ಎಲ್ಲಾ ಹಂತದ ಶಿಕ್ಷಣ ಸರ್ಕಾರಿ ಶಾಲಾ ಕಾಲೇಜುಗಳಲ್ಲಿಯೇ ನಡೆಯಿತು. ಸರ್ಕಾರಿ ಶಾಲೆಯ ಸ್ಥಿತಿಗತಿ ನೋಡಿ ಏನಾದರೂ ಮಾಡಬೇಕಿನ್ನುವ ತವಕದಿಂದ ನಾನು ಓದಿದ ಶಾಲೆಗೆ ಕೊಠಡಿ ನಿರ್ಮಿಸಿ ಕೊಟ್ಟಿದ್ದೇನೆ’ ಎಂದರು.

‘ಈಗಲೂ ಇಂತಹ ಯಾವುದೇ ಅಗತ್ಯಗಳಿದ್ದರೆ, ಕಂಪನಿಗಳ ಸಿ.ಎಸ್.ಆರ್ ನಿಧಿಯಿಂದ ಅಥವಾ ದಾನಿಗಳಿಂದ ಕೊಡಿಸಲು ಸಿದ್ಧ. ಸರ್ಕಾರಿ ಶಾಲೆಯಲ್ಲಿ ಓದಿದ ಹಾಗೂ ಉನ್ನತ ಹುದ್ದೆ ಅಲಂಕರಿಸಿರುವ ಹಳೆಯ ವಿದ್ಯಾರ್ಥಿಗಳನ್ನು ಗುರುತಿಸಿ ಹೆಚ್ಚು ಸಂಘಗಳನ್ನು ರಚಿಸಲು ಪ್ರೋತ್ಸಾಹ ನೀಡಲಾಗುವುದು. ಹಳೆಯ ವಿದ್ಯಾರ್ಥಿ ಸಂಘಗಳು ಕಾಲ ಕಾಲಕ್ಕೆ ಸಭೆ ಸೇರಿ ಸಕ್ರಿಯವಾಗಿ ತೊಡಗಿಕೊಂಡು ಈ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.