ADVERTISEMENT

ಕರ್ಪೂರು ಗ್ರಾಮ ಪಂಚಾಯಿತಿ: ವಿವಿಧ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 4:39 IST
Last Updated 1 ಜನವರಿ 2018, 4:39 IST

ಆನೇಕಲ್‌: ತಾಲ್ಲೂಕಿನ ಕರ್ಪೂರು, ಮಾಯಸಂದ್ರ ಹಾಗೂ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹ 2.25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಚಾಲನೆ ನೀಡಲಾಗಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ತಾಲ್ಲೂಕಿನ ಕರ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಚಮಾನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳ ವಿವಿಧ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಚರಂಡಿ ವ್ಯವಸ್ಥೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.

ADVERTISEMENT

ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳು ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ಮಾಡಬೇಕು. ಈ ತೆರಿಗೆಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬಳಸಿಕೊಳ್ಳಬಹುದಾಗಿದೆ. ಸರ್ಕಾರದ ಅನುದಾನದ ಜೊತೆಗೆ ಗ್ರಾಮ ಪಂಚಾಯಿತಿಗಳ ಆದಾಯ ಹೆಚ್ಚಾದರೆ ಕ್ರಿಯಾ ಯೋಜನೆ ರೂಪಿಸಿ ಅವಶ್ಯಕವಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕರ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಶ್ರೀನಿವಾಸ್ ಮಾತನಾಡಿ, ಶಾಸಕರ ಸಹಕಾರದಿಂದ ಸುಮಾರು ₹ 5 ಕೋಟಿಗೂ ಹೆಚ್ಚು ಅನುದಾನದಿಂದ ಕರ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಲಾಗಿದೆ ಎಂದರು.

ಮಾಯಸಂದ್ರ ಪಂಚಾಯಿತಿ ಅಧ್ಯಕ್ಷ ನಾಗರಾಜು, ಆನೇಕಲ್ ಯೋಜನಾ ಪ್ರಾಧಿಕಾರ ಸದಸ್ಯರಾದ ಕೆಂಪರಾಜು, ಉಪಾಧ್ಯಕ್ಷ ಸಂಪಂಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜು, ಕೃಷ್ಣಾರೆಡ್ಡಿ, ಗೋವಿಂದರಾಜು, ಸುನೀಲ್, ಮುಖಂಡರಾದ ಬಿ.ಪಿ.ರಮೇಶ್, ಮುತ್ಸಂದ್ರ ಮಂಜುನಾಥ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.