ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಲು ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2018, 17:15 IST
Last Updated 18 ಜುಲೈ 2018, 17:15 IST

ದೊಡ್ಡಬಳ್ಳಾಪುರ: 2018–19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಕೂಲವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2017ರ ಎಸ್‌ಎಸ್‌ಎಲ್‌ಸಿ ಪರೀಕ್ಷಾಫಲಿತಾಂಶದಲ್ಲಿ ರಾಜ್ಯದಲ್ಲಿನ ಜಿಲ್ಲಾವಾರು ಸ್ಥಾನಮಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 10ನೇ ಸ್ಥಾನದಲ್ಲಿತ್ತು. 2018ರ ಫಲಿತಾಂಶದಲ್ಲಿ 14ನೇ ಸ್ಥಾನದಲ್ಲಿದೆ ಎಂದರು.

ADVERTISEMENT

2017 ಕ್ಕಿಂತ 2018ರಲ್ಲಿ ಶೇಕಡಾವಾರು ಫಲಿತಾಂಶ ಶೇ 5.14 ರಷ್ಟು ಹೆಚ್ಚಳವಾಗಿದ್ದರೂ ಜಿಲ್ಲೆ 14ನೇ ಸ್ಥಾನದಲ್ಲಿರುವುದರಿಂದ ಅಧಿಕಾರಿಗಳು ಈಗಿನಿಂದಲೇ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುವಂತಹ ಯೋಜನೆಗಳನ್ನು ರೂಪಿಸಬೇಕು ಎಂದರು.

ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಆಸ್ತಿಗಳನ್ನು ಹೊಂದಿರುವ ಬಗ್ಗೆ ಹಾಗೂ ಇದುವರೆಗೆ ಇಲಾಖೆ ಹೆಸರಿಗೆ, ಖಾತಾ ಮಾಡಿಸಿಕೊಳ್ಳದಿದ್ದಲ್ಲಿ ಹಾಗೂ ಸಮಸ್ಯೆ ಇದ್ದಲ್ಲಿ ಮಾಹಿತಿ ಒದಗಿಸುವಂತೆ ಕಳೆದ ಸಭೆಯಲ್ಲಿಯೇ ಕೇಳಿದ್ದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾಹಿತಿ ನೀಡಿಲ್ಲ. ವಿವಿಧ ಇಲಾಖೆಗಳಿಗೆ ಖಾತೆ ಕುರಿತು ಸಮಸ್ಯೆ ಇದ್ದರೆ ಮೂಲ ದಾಖಲಾತಿಗಳನ್ನು ನೀಡಿ ಜಿಲ್ಲಾಧಿಕಾರಿ ಗಮನಕ್ಕೆ ಅಥವಾ ಜಿಲ್ಲಾಪಂಚಾಯಿತಿಯ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸಿ
ಕೊಳ್ಳಬೇಕೆಂದು ಅಧ್ಯಕ್ಷರು ಹೇಳಿದರು.

ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಓವರ್ ಹೆಡ್ ಟ್ಯಾಂಕ್‌ಗಳಿಗೆ ಪೈಪ್‌ಲೈನ್ ಕಾಮಗಾರಿಯು ಮುಗಿದಿರುವುದಿಲ್ಲ ಎಂದು ಸದಸ್ಯರುಗಳು ಪ್ರಶ್ನಿಸಿದರು. ಆಗ ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಮಾತನಾಡಿ, ಅನುದಾನದ ಲಭ್ಯತೆ ಇಲ್ಲದಿದ್ದರಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಿಲ್ಲ. ಈ ಸಂಬಂಧ ಪೈಪ್‌ಲೈನ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಡಿ.ಆರ್.ಎಸ್ ಅನುದಾನದಲ್ಲಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಇದ್ಕಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಕಡತವನ್ನು ಹಿಂಬಾಲಿಸುವಂತೆ ಹಾಗೂ ಆಡಳಿತ ಮತ್ತು ತಾಂತ್ರಿಕ ಮಂಜೂರಾತಿ ದೊರೆತ ನಂತರ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕೆಂದು ತಿಳಿಸಿದರು.

ಎಲ್ಲಿಗೆ ಎಷ್ಟು: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ 2018–19ನೇ ಸಾಲಿನಲ್ಲಿ ಜಿಲ್ಲೆಗೆ ₹5 ಕೋಟಿ ಅನುದಾನ ಬಿಡುಗಡೆಯಾಗಿದೆ. ಜನಸಂಖ್ಯೆ ಆಧಾರದ ಮೇಲೆ ಕ್ರಿಯಾಯೋಜನೆ ರೂಪಿಸಲಾಗಿದೆ. ದೇವನಹಳ್ಳಿ ತಾಲ್ಲೂಕಿಗೆ ₹ 1.28 ಕೋಟಿ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ₹1.85 ಕೋಟಿ, ಹೊಸಕೋಟೆ ತಾಲ್ಲೂಕಿಗೆ ₹1.76 ಕೋಟಿಹಾಗೂ ನೆಲಮಂಗಲ ತಾಲ್ಲೂಕಿಗೆ ₹1.39 ಕೋಟಿ ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು. ಆಗ ಸದಸ್ಯರುಗಳು ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಪೂರ್ಣಗೊಳಿಸಲು ತಿಳಿಸಿದರು.

ಜಿಲ್ಲೆಯಲ್ಲಿರುವ ಕೆಲವು ಕೇಂದ್ರ ಶಾಲಾ ಕಟ್ಟಡಗಳು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಶೀಘ್ರವಾಗಿ ನೆಲಸಮಗೊಳಿಸಬೇಕು ಎಂದು ಸರ್ವ ಸದಸ್ಯರು ಅನುಮೋದಿಸಿ ಆಗ್ರಹಿಸಿದರು.

ಆಗ ಅಧ್ಯಕ್ಷರು ಮಾತನಾಡಿ, ಕೂಡಲೇ ನೆಲಸಮಗೊಳಿಸಬೇಕು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಸೂಚಿಸಿದರು.

ಆಫ್ರಿಕನ್ ಕ್ಯಾಟ್‌ಫಿಶ್ ಸಾಕಾಣಿಕೆ ವಿರುದ್ಧ ಕ್ರಮಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಜಿಲ್ಲೆಯ ಗಡಿಭಾಗದಲ್ಲಿ ಕ್ಯಾಟ್‌ಫಿಶ್ ತಡೆಗಟ್ಟಲು ಕೂಡಲೇ ಕ್ರಮಕೈಗೊಳ್ಳಲು ಮೀನುಗಾರಿಕೆ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಸಬಲೀಕರಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಿ.ಎನ್. ಅನಂತಕುಮಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪಕಾರ್ಯದರ್ಶಿ ಉಮಾನಂದ ರೈ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್. ಶೋಭಾ, ಯೋಜನಾ ನಿರ್ದೇಶಕ ಬಸವರಾಜು, ಸ್ಥಾಯಿ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸದಸ್ಯರುಗಳು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.