ADVERTISEMENT

ಅರಭಾವಿ ಕ್ಷೇತ್ರ; ಟಿಕೆಟ್‌ ಕೇಳಿದ ಈರಣ್ಣಾ ಕಡಾಡಿ

​ಪ್ರಜಾವಾಣಿ ವಾರ್ತೆ
Published 20 ಮೇ 2017, 5:53 IST
Last Updated 20 ಮೇ 2017, 5:53 IST

ಬೆಳಗಾವಿ:  ಜಿಲ್ಲೆಯ ಗೋಕಾಕ ತಾಲ್ಲೂಕಿನ ಅರಭಾವಿ ವಿಧಾನಸಭಾ ಕ್ಷೇತ್ರದಿಂದ ಈ ಸಲ ಚುನಾವಣೆಗೆ ಸ್ಪರ್ಧಿಸಲು ತಮಗೆ ಅವಕಾಶ ನೀಡಬೇಕೆಂದು ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಪಕ್ಷದ ರಾಜ್ಯ ನಾಯಕರನ್ನು ಒತ್ತಾಯಿಸಿದ್ದಾರೆ.

ಪ್ರಸ್ತುತ ಈ ಕ್ಷೇತ್ರವನ್ನು ಬಿಜೆಪಿಯವರೇ ಆದ ಬಾಲಚಂದ್ರ ಜಾರಕಿಹೊಳಿ ಪ್ರತಿನಿಧಿಸುತ್ತಿರುವುದು ಗಮನಾರ್ಹ. ‘ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಪ್ರಭಾವಿ ನಾಯಕರಾಗಿದ್ದು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆದ್ದುಬರುವ ಶಕ್ತಿ ಅವರಿಗಿದೆ. ಹೀಗಾಗಿ ಸ್ಥಳೀಯವನಾದ ನನಗೆ ಅರಭಾವಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಹಿರಿಯ ಮುಖಂಡರಿಗೆ ಮನವಿ ಸಲ್ಲಿಸಿದ್ದೇನೆ’ ಎಂದು ಈರಣ್ಣಾ ‘ಪ್ರಜಾವಾಣಿ’ಗೆ ತಿಳಿಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಯೋಜನೆ ಹಾಕಿಕೊಂಡಿದ್ದಾರೆ. ಈ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲಾಗಿದೆ. ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿವೆ. ಇವುಗಳಲ್ಲಿ ಕನಿಷ್ಠ 12ರಿಂದ 15 ಸ್ಥಾನ ಗೆಲ್ಲಲು ಪಕ್ಷದ ನಾಯಕರು ಲೆಕ್ಕಾಚಾರ ಹಾಕಿದ್ದಾರೆ ಎಂದು ಹೇಳಿದರು.

ADVERTISEMENT

‘ಇದರ ಭಾಗವಾಗಿ, ಇದುವರೆಗೆ ಗೆಲ್ಲಲಾರದ ಕ್ಷೇತ್ರಗಳ ಮೇಲೂ ಗಮನಹರಿಸಬೇಕಾಗಿದೆ. ಇಂತಹ ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಿ, ಗೆದ್ದುಕೊಳ್ಳಲು ಸಾಧ್ಯವಿದೆ’ ಎಂದು ನುಡಿದರು.

‘ಜಿಲ್ಲೆಯ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರು ಇದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಬಲವಾಗಿದೆ. ಇನ್ನುಳಿದಂತೆ ಗೋಕಾಕ, ಯಮಕನಮರಡಿ, ಕುಡಚಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರಗಳಲ್ಲಿ ಇದುವರೆಗೆ ಬಿಜೆಪಿ ಅಭ್ಯರ್ಥಿಗಳಿಗೆ ಗೆಲ್ಲಲು ಸಾಧ್ಯವಾಗಿಲ್ಲ. ಈ ಕ್ಷೇತ್ರಗಳನ್ನೂ ಗೆಲ್ಲಬೇಕಾಗಿದೆ. ಹೀಗಾಗಿ ಈ ಕ್ಷೇತ್ರಗಳಲ್ಲಿ ಪ್ರಮುಖ ನಾಯಕರನ್ನು ಕಣಕ್ಕಿಳಿಸಬಹುದೆಂದು ಸಲಹೆ ನೀಡಿದ್ದೇನೆ’ ಎಂದು ಹೇಳಿದರು.

ಸ್ಪರ್ಧಿಸಿದವರೆಲ್ಲರೂ ಹೊರಗಡೆಯವರು: ‘ಅರಭಾವಿ ಕ್ಷೇತ್ರ ನಿರ್ಮಾಣವಾದಾಗಿನಿಂದಲೂ ಬಹುತೇಕ ಹೊರಗಡೆಯವರೇ ಇಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ನಾನು ಇದುವರೆಗೆ ಏಳು ಚುನಾವಣೆಗಳಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ.

1994ರಲ್ಲಿ ಮಾತ್ರ ನಾನು ಚುನಾವಣೆ ಸ್ಪರ್ಧಿಸಿ, ಪಕ್ಷವನ್ನು ಕಟ್ಟಿ ಬೆಳೆಸಿದೆ.ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಹಿರಿಯ ಮುಖಂಡರ ನಿರ್ದೇಶನದ ಮೇರೆಗೆ ಬೇರೆ ಬೇರೆ ಅಭ್ಯರ್ಥಿಗಳಿಗೆ ಬಿಟ್ಟುಕೊಟ್ಟೆ.

ಆದರೆ, ಅವರ ಪರ ಚುನಾವಣೆಯಲ್ಲಿ ಕೆಲಸ ಮಾಡುವುದನ್ನು ಬಿಡಲಿಲ್ಲ. ಇದನ್ನು ಗಮನಿಸಿ, ಪಕ್ಷಕ್ಕಾಗಿ ಇಷ್ಟು ವರ್ಷಗಳ ಕಾಲ ದುಡಿದಿರುವ ನನಗೆ ಈ ಬಾರಿ ಅವಕಾಶ ನೀಡಬೇಕೆಂದು ರಾಜ್ಯ ನಾಯಕರನ್ನು ಕೋರಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.