ADVERTISEMENT

‘ಅಶಾಂತಿ ಮೂಡಿಸುತ್ತಿರುವ ಬಿಎಸ್‌ವೈ’

​ಪ್ರಜಾವಾಣಿ ವಾರ್ತೆ
Published 16 ಜುಲೈ 2017, 10:05 IST
Last Updated 16 ಜುಲೈ 2017, 10:05 IST

ಬೆಳಗಾವಿ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರ ಮೈ ಮುಟ್ಟಿದರೆ ಬೆಂಕಿ ಹಚ್ಚುತ್ತೇವೆ ಎಂದು ಹೇಳುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಸಂಸದ ಬಿ.ಎಸ್‌.ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಪ್ರಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಕಾಂಗ್ರೆಸ್ಸಿನ ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಗುಜರಾತ್‌ ಮಾದರಿಯಲ್ಲಿ ರಾಜ್ಯದಲ್ಲಿ ಸಮಾಜವನ್ನು ಒಡೆಯುವಂತಹ ಕೆಲಸವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ. ವೋಟ್‌ ಬ್ಯಾಂಕ್‌ ಆಸೆಗಾಗಿ ಜನರನ್ನು ಪ್ರಚೋದಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಹಿಂದೂಗಳ ರಕ್ಷಕರು ತಾವೊಬ್ಬರೇ ಎನ್ನುವಂತೆ ಬಿಜೆಪಿ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ನಾವ್ಯಾರೂ ಹಿಂದೂಗಳಲ್ವಾ? ಅವರಷ್ಟೇ ಹಿಂದೂಗಳಾ? ಹಿಂದೂಗಳ ಪರ ವಕಾಲತ್ತು ವಹಿಸಲು ಇವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ರಿಸಿದರು. ಹಿಂದೂಗಳು ಸೇರಿದಂತೆ ಎಲ್ಲ ಜಾತಿ, ಜನಾಂಗದವರ ಹಿತಕಾಪಾಡುವ ಪಕ್ಷ ಇರುವುದು ಕಾಂಗ್ರೆಸ್‌ ಒಂದೇ ಎಂದರು.

ADVERTISEMENT

ಯಾರ ಮೇಲೆ ಪ್ರಕರಣಗಳು ದಾಖಲಾಗಿವೆಯೇ ಅಂತಹವರ ಮೇಲೆ ಕ್ರಮಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಾಲ ಮನ್ನಾದ ಬಗ್ಗೆ ಏಕೆ ಮಾತನಾಡುತ್ತಿಲ್ಲ: ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದರೆ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲವನ್ನು ಕೇಂದ್ರ ಸರ್ಕಾರದಿಂದ ಮನ್ನಾ ಮಾಡಿಸುವುದಾಗಿ ಯಡಿಯೂರಪ್ಪ ಹೇಳಿದ್ದರು. ಈಗ ಏಕೆ ಮಾತನಾಡುತ್ತಿಲ್ಲ ಎಂದು ಟೀಕಿಸಿದರು.

ಆಘಾತಕಾರಿ: ರಾಜ್ಯದ ಕಾರಾಗೃಹ ಇಲಾಖೆಯ ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳು ಆರೋಪ– ಪ್ರತ್ಯಾರೋಪ ಮಾಡುತ್ತಿರುವುದು ಆಘಾತಕಾರಿ ಅಂಶ. ನಿಯಮಾವಳಿ ಮೀರಿ ನಡೆದುಕೊಳ್ಳುತ್ತಿದ್ದಾರೆ ಎಂದು ಡಿಐಜಿ ಡಿ.ರೂಪಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.

ಶೀಘ್ರ ಜಾತಿ ಗಣತಿ ಪ್ರಕಟ: ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಸಮ್ಮಿಶ್ರ ಸರ್ಕಾರವಿದ್ದಾಗ ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ ಮಾಡಲು ನಿರ್ಧರಿಸಲಾಗಿತ್ತು. ಅದಕ್ಕಾಗಿ ₹ 20 ಕೋಟಿ ಮೀಸಲು ಇಡಲಾಗಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ₹ 200 ಕೋಟಿ ವೆಚ್ಚ ಮಾಡಿ ಸಮೀಕ್ಷೆ ಮಾಡಿಸಲಾಗಿದೆ. ಬಹುತೇಕ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಬಹಿರಂಗಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.