ADVERTISEMENT

ಉ.ಕ. ಅಭಿವೃದ್ಧಿಗಾಗಿ ಪ್ರತಿಭಟನೆ: ಕಾರ್ಯಕರ್ತರ ಬಂಧನ, ಬಿಡುಗಡೆ

ನವ ನಿರ್ಮಾಣ ಪಡೆಯಿಂದ ರಸ್ತೆ ತಡೆ ನಡೆಸಲು ಯತ್ನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2015, 9:06 IST
Last Updated 6 ಜುಲೈ 2015, 9:06 IST

ಬೆಳಗಾವಿ: ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಭಾನು ವಾರ ರಸ್ತೆ ತಡೆ ನಡೆಸಲು ಯತ್ನಿಸಿದ ಕರ್ನಾಟಕ ನವ ನಿರ್ಮಾಣ ಪಡೆಯ 26 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಕರ್ನಾಟಕ ನವ ನಿರ್ಮಾಣ ಪಡೆಯ ಅಧ್ಯಕ್ಷ ರಾಜೀವ ಟೋಪಣ್ಣವರ ನೇತೃತ್ವ ದಲ್ಲಿ ಕಾರ್ಯಕರ್ತರು ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಬೆಳಿಗ್ಗೆ ಪ್ರತಿಭ ಟನೆ ಆರಂಭಿಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಕಾರ್ಯಕರ್ತರು ಚನ್ನಮ್ಮ ವೃತ್ತಕ್ಕೆ ಬಂದು ರಸ್ತೆ ತಡೆ ನಡೆಸಲು ಮುಂದಾದರು.

ಆದರೆ, ರಸ್ತೆ ತಡೆ ನಡೆಸಲು ಅವಕಾಶ ನೀಡದ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಟೋಪಣ್ಣವರ ಸೇರಿ 26 ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಮಾರ್ಕೆಟ್‌ ಪೊಲೀಸ್‌ ಠಾಣೆಗೆ ಒಯ್ದು ಕರ್ನಾಟಕ ಪೊಲೀಸ್‌ ಕಾಯ್ದೆಯ ಕಲಂ 71ರಡಿ ಪ್ರಕರಣದ ದಾಖಲಿಸಿ ಮಧ್ಯಾ ಹ್ನದ ಬಳಿಕ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೀವ ಟೋಪಣ್ಣವರ, ‘ನಾಲ್ಕು ಬಾರಿ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆದರೂ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಕಳೆದ ಐದು ದಿನಗಳ ಕಾಲ ನಡೆದ ಅಧಿವೇಶನಗಳಲ್ಲೂ ಈ ಭಾಗದ ಅಭಿವೃದ್ಧಿ ವಿಷಯ ಚರ್ಚೆಗೆ ಬಂದಿಲ್ಲ. ರಾಜ್ಯ ಸರ್ಕಾರ ಈ ಭಾಗದ ಅಭಿವೃದ್ಧಿ ಕುರಿತು ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಆರೋಪಿಸಿದರು.

‘ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕಳಸಾ– ಬಂಡೂರಿ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಲು ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಬೆಳಗಾ ವಿಯ ಅಭಿವೃದ್ಧಿಗೆ ಆದ್ಯತೆ ಕೊಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಪ್ರತಿ ಬಾರಿಯೂ ಬೆಳಗಾವಿಯಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಸಲಾ ಗುತ್ತಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸದನದೊಳಗೆ ಚರ್ಚೆ ಸಮರ್ಪ ಕವಾಗಿ ಆಗುವುದಿಲ್ಲ. ಸಿದ್ದರಾಮಯ್ಯ ಅವರು ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ ವಹಿಸುತ್ತಿದ್ದಾರೆ. ಕಾಟಾಚಾರಕ್ಕಾಗಿ ಮಳೆಗಾಲದ ಅಧಿವೇಶ ನವನ್ನು ಬೆಳಗಾವಿಯಲ್ಲಿ ನಡೆಸುತ್ತಿದ್ದಾರೆ’ ಎಂದು ಟೋಪಣ್ಣವರ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.