ADVERTISEMENT

‘ಮಾರ್ಚ್‌ನಲ್ಲಿ ಜಿಲ್ಲೆಗೆ 500 ಹೊಸ ಬಸ್‌’

ಬೆಳಗಾವಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2017, 6:14 IST
Last Updated 19 ಜನವರಿ 2017, 6:14 IST
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಪರಿಶೀಲಿಸಿದರು
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಪರಿಶೀಲಿಸಿದರು   

ಬೆಳಗಾವಿ: ಜಿಲ್ಲೆಗೆ  ಸಾರಿಗೆ ಇಲಾಖೆ ಯಿಂದ ಮಾರ್ಚ್‌ ಅಂತ್ಯಕ್ಕೆ ೫೦೦ ಹಾಗೂ ಜುಲೈ ವೇಳೆಗೆ ೮೦೦ ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಲ್ಲಿ ಬುಧವಾರ ತಿಳಿಸಿದರು.

ಇಲ್ಲಿನ ಬಸ್ ನಿಲ್ದಾಣಕ್ಕೆ  ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಬಸ್ ನಿಲ್ದಾಣವನ್ನು ಅತ್ಯಾಧುನಿಕವಾಗಿ ನಿರ್ಮಿಸಲು ಉದ್ದೇಶಿ ಸಲಾಗಿದೆ. ನಿಲ್ದಾಣದ ಆವರಣದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಅಂಗಡಿಗಳವರಿಗೆ ಸೂಚಿಸಲಾಗಿದೆ. ಜ. 26ರಿಂದ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸ ಲಾಗುವುದು’ ಎಂದು ಹೇಳಿದರು.

‘ಅಥಣಿ, ಕಾಗವಾಡ, ಹುಕ್ಕೇರಿ, ಅಂಕಲಗಿ, ಲೋಕಾಪುರ ಬಸ್ ನಿಲ್ದಾಣ ಹಾಗೂ ಡಿಪೊಗಳ ನಿರ್ಮಾಣಕ್ಕೆ ₹ 30 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು.

‘ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವ ರಾಜ್ಯಗಳಿಗೆ ಬರ ಪರಿಹಾರ ಕಾಮಗಾರಿ ನಡೆಸಲು ಕೇಂದ್ರದ ಬಿಜೆಪಿ ಸರ್ಕಾರ ಸಮರ್ಪಕ ಅನುದಾನ ಬಿಡುಗಡೆ ಮಾಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದು ₹ 4,000 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ₹ 1,000 ಕೋಟಿ ಅನುದಾನವನ್ನಷ್ಟೇ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.