ADVERTISEMENT

ಮೃತ ರೈತನ ಕುಟುಂಬಕ್ಕೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 5:30 IST
Last Updated 10 ನವೆಂಬರ್ 2017, 5:30 IST

ಹುಕ್ಕೇರಿ: ‌ಎಲಿಮುನ್ನೋಳಿ ಗ್ರಾಮದಲ್ಲಿ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಮಲ್ಲಿಕಾರ್ಜುನ ದೇಸಾಯಿ ಅವರ ಪತ್ನಿಗೆ ಸರ್ಕಾರದಿಂದ ಮಂಜೂರಾದ ₹5 ಲಕ್ಷ ಮೊತ್ತದ ಚೆಕ್ ಅನ್ನು ಶಾಸಕ ಉಮೇಶ ಕತ್ತಿ ವಿತರಿಸಿದರು.

ಹುಕ್ಕೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿದ ಅವರು ‘ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು. ಧೈರ್ಯವಾಗಿ ಇರಬೇಕು. ಯಾವುದೇ ಸಮಸ್ಯೆ ಬಂದಲ್ಲಿ ತಿಳಿಸಬೇಕು’ ಎಂದು ದೇಸಾಯಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವಿಧವಾ ವೇತನ ಸೇರಿದಂತೆ ಸರ್ಕಾರದ ಎಲ್ಲ ಸೌಲಭ್ಯ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಗ್ರಾಮಸ್ಥರೊಂದಿಗೆ ಚರ್ಚಿಸಿದ ಅವರು, ‘ಲೋಕೋಪಯೋಗಿ ಇಲಾಖೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ, ಪಿ.ಎಂ.ಜಿ.ಎಸ್.ವೈಯಿಂದ ₹7.34 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ ಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯೆ ಅನಸೂಯಾ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಸುರೇಖಾ ರಾಚನ್ನವರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಸ್ತೂರಿ ತಿಪ್ಪಾಗೋಳ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಮರಡಿ, ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ, ಪಿಕಾರ್ಡ್ ಬ್ಯಾಂಕ್‌ ಅಧ್ಯಕ್ಷ ಅಪ್ಪಾಸಾಹೇಬ ಸಂಕನ್ನವರ, ಎಪಿಎಂಸಿ ಅಧ್ಯಕ್ಷ ಪ್ರಶಾಂತ ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ಪರಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಸತ್ಯಪ್ಪ ನಾಯಿಕ ಭಾಗವಹಿಸಿದ್ದರು. ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ. ಮಗೆನ್ನವರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.