ADVERTISEMENT

ವಾದ ಮಂಡನೆಗೆ ನಾಡಕರ್ಣಿ: ಕೋನರಡ್ಡಿ ತೀವ್ರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 6:56 IST
Last Updated 20 ಮಾರ್ಚ್ 2017, 6:56 IST

ಹುಬ್ಬಳ್ಳಿ: ಮಹಾದಾಯಿ, ಕಳಸಾ–ಬಂಡೂರಿ ನದಿ ವಿವಾದಕ್ಕೆ ಸಂಬಂಧಿಸಿ ದಂತೆ ಕೇಂದ್ರ ಸರ್ಕಾರವು ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಅವರಿಗೆ ವಾದ ಮಂಡಿಸಲು ಅವಕಾಶ ಕಲ್ಪಿಸಿರುವುದು ಸರಿಯಲ್ಲ. ಇದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಬಹುದೊಡ್ಡ ಅನ್ಯಾಯ ಎಂದು ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಆಕ್ಷೇಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಹಿಂದಿನಿಂದಲೂ ನಾಡಕರ್ಣಿ ಅವರಿಗೆ ಗೋವಾ ಪರ ವಕಾಲತ್ತು ವಹಿಸದಂತೆ ತೀವ್ರ ವಿರೋಧ ವ್ಯಕ್ತ ಪಡಿಸುತ್ತಲೇ ಬಂದಿದ್ದೇವೆ. ಆದರೂ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರು ವುದು ನೋಡಿದರೆ ಅವರಿಗೆ ಕರ್ನಾ ಟಕಕ್ಕಿಂತ ಗೋವಾದ ಹಿತಾಸಕ್ತಿಯೇ ಮುಖ್ಯವಾದಂತಿದೆ’ ಎಂದಿದ್ದಾರೆ.

‘ಹೆಚ್ಚುವರಿ ಸಾಲಿಸಿಟರ್ ಜನರಲ್ ಆದವರು ಒಂದು ರಾಜ್ಯದ ಹಿತ ಬಲಿ ಕೊಟ್ಟು ಇನ್ನೊಂದು ರಾಜ್ಯದ ಪರ ವಕಾಲತ್ತು ವಹಿಸುವುದು ನೆಲದ ಕಾನೂನಿನ ದೃಷ್ಟಿಯಿಂದ ಒಳ್ಳೆಯದಲ್ಲ. ಆದರೂ ಅವರಿಗೆ ಮತ್ತೆ ವಾದ ಮಂಡಿಸಲು ಅವಕಾಶ ನೀಡಿರುವುದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆಯಲ್ಲಿ ಭರವಸೆ ಇಲ್ಲವೇ ಅಥವಾ ಗೋವಾದ ಹಿತವೇ ಮುಖ್ಯವೇ’ ಎಂದು ಪ್ರಶ್ನಿಸಿದ್ದಾರೆ.

‘ರಾಜ್ಯದ ಬಿಜೆಪಿ ಸಂಸದರು ಜಲದ ವಿಷಯದಲ್ಲಿ ರಾಜಕೀಯ ಮಾಡುವು ದನ್ನು ಬಿಟ್ಟು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ನಿಯೋಗ ಕೊಂಡೊಯ್ಯಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ವಿಧಾನಸಭೆ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ನೇತೃತ್ವದಲ್ಲಿ ರಾಜ್ಯದ ನಿಯೋಗ ಕೊಂಡೊಯ್ದು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ವಸ್ತುಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ನ್ಯಾಯಮಂಡಳಿ ಹೊರಗೇ ಬಗೆಹರಿಸಲು ಪ್ರಯತ್ನ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.