ADVERTISEMENT

ಆಫ್ರಿಕಾ ವಿದ್ಯಾರ್ಥಿಗಳ ಆತಂಕ ನಿವಾರಣೆಗೆ ಸಭೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2016, 20:06 IST
Last Updated 11 ಫೆಬ್ರುವರಿ 2016, 20:06 IST
ತಾಂಜಾನಿಯಾ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಪೊಲೀಸರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪುರಭವನದ ಎದುರು ಗುರುವಾರ ಪ್ರತಿಭಟನೆ ಮಾಡಿದರು
ತಾಂಜಾನಿಯಾ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಪೊಲೀಸರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪುರಭವನದ ಎದುರು ಗುರುವಾರ ಪ್ರತಿಭಟನೆ ಮಾಡಿದರು   

ಬೆಂಗಳೂರು: ತಾಂಜಾನಿಯಾ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣದ ನಂತರ ಪೂರ್ವ ವಲಯದ ಠಾಣೆಗಳ ವ್ಯಾಪ್ತಿಯಲ್ಲಿ ವಾಸವಾಗಿರುವ ಆಫ್ರಿಕಾ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಆತಂಕವನ್ನು ದೂರ ಮಾಡಲು ಪೊಲೀಸರು ಅವರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ.

‘ಈ ತಿಂಗಳ ಕೊನೆಯಲ್ಲಿ ಅಥವಾ ಮಾರ್ಚ್ ಮೊದಲನೇ ವಾರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್‌ ಪಿ.ಹರಿಶೇಖರನ್ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಕೊತ್ತನೂರು, ಹೆಣ್ಣೂರು, ಬಾಣಸವಾಡಿ, ಮಹದೇವಪುರ, ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಆಫ್ರಿಕಾ ಖಂಡದ ರಾಷ್ಟ್ರಗಳ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ. ಹೆಸರಘಟ್ಟ ಮುಖ್ಯರಸ್ತೆಯ ಗಣಪತಿನಗರದಲ್ಲಿ ನಡೆದಂತಹ ಘಟನೆ ಈ ಭಾಗದಲ್ಲಿ ಮರುಕಳಿಸದಂತೆ ಮುಂಜಾಗ್ರತೆ ವಹಿಸಲು  ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

‘ಆಫ್ರಿಕಾ ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು, ಡಿಸಿಪಿ–ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಧಿಕಾರಿಗಳಿಗೆ ಆಫ್ರಿಕಾ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಭಾಷೆ ತೊಡಕಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲಾಗುವುದು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು ಇಲ್ಲಿ ಬಂದ ನಂತರ ವಾಹನಗಳನ್ನು ಖರೀದಿಸುತ್ತಾರೆ. ಅವರಿಗೆ ಇಲ್ಲಿನ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಹೀಗಾಗಿ ಅವರಿಗೆ ಆರ್‌ಟಿಒ ಅಧಿಕಾರಿಗಳಿಂದ ಸಂಚಾರ ನಿಯಮಗಳ ಬಗ್ಗೆ ಉಪನ್ಯಾಸ ಕೊಡಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಕಾಲೇಜುಗಳಲ್ಲಿ ಉತ್ತಮ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಭರವಸೆ ನೀಡಿರುತ್ತವೆ. ಆದರೆ, ಕಾಲೇಜುಗಳಲ್ಲಿ ಯಾವುದೇ ಸೌಲಭ್ಯಗಳಿರುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಕಾಲೇಜು ತೊರೆಯಲು ಮುಂದಾಗುತ್ತಾರೆ. ಈ ಕಾರಣಕ್ಕೆ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳ ನಡುವೆ ಕಿತ್ತಾಟ ನಡೆಯುತ್ತಿರುತ್ತದೆ. ಇದನ್ನು ನಿವಾರಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು  ಹೇಳಿದರು.

‘ಆಫ್ರಿಕಾ ಖಂಡದ ಕೆಲವು ವಿದ್ಯಾರ್ಥಿಗಳು ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆಯಂತಹ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಅಲ್ಲದೇ, ಸ್ಥಳೀಯರೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳುವಂತೆ ತಿಳಿ ಹೇಳಲಾಗುವುದು’ ಎಂದು ತಿಳಿಸಿದರು.

‘ಹೆಚ್ಚಿನ ವಿದ್ಯಾಭ್ಯಾಸ ಅಥವಾ ಇನ್ನಿತರ ಕಾರಣಗಳಿಗಾಗಿ ವೀಸಾ ಅವಧಿ ಮುಗಿದ ನಂತರವೂ ಕೆಲವು ವಿದ್ಯಾರ್ಥಿಗಳು ಇಲ್ಲಿಯೇ ವಾಸವಾಗುತ್ತಾರೆ. ಅವರಿಗೆ ವೀಸಾ ನೀತಿ ನಿಯಮಗಳ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಅರಿವು ಮೂಡಿಸಲು ಎಫ್‌ಆರ್‌ಆರ್‌ಒ ಅಧಿಕಾರಿಗಳ ಮೂಲಕ ಉಪನ್ಯಾಸ ಏರ್ಪಡಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.