ADVERTISEMENT

ಕೆ.ಮರೀಗೌಡ ನಿರೀಕ್ಷಣಾ ಜಾಮೀನು ಅರ್ಜಿ

ಬಾಕಿ ಪ್ರಕರಣದ ವಿವರ ಒದಗಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2016, 19:35 IST
Last Updated 28 ಜುಲೈ 2016, 19:35 IST

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ   ಕೆ.ಮರೀಗೌಡ ವಿರುದ್ಧ ಬಾಕಿ ಇರುವ ಕ್ರಿಮಿನಲ್‌ ಪ್ರಕರಣಗಳ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ನಿರೀಕ್ಷಣಾ ಜಾಮೀನು ಕೋರಿರುವ ಮರೀಗೌಡ ಅವರ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ‘ಮರೀಗೌಡರ ವಿರುದ್ಧ ಇದ್ದ ಪ್ರಕರಣಗಳನ್ನು ಸರ್ಕಾರ ಹಿಂದಕ್ಕೆ ಪಡೆದಿದ್ದು ಒಂದು ಪ್ರಕರಣ ಮಾತ್ರ ಬಾಕಿ ಇದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಾಸಿಕ್ಯೂಷನ್‌ ಪರ ವಕೀಲ ಚೇತನ್ ದೇಸಾಯಿ, ‘ಬಾಕಿ ಇರುವುದು ವಂಚನೆ ಆರೋಪದ ಪ್ರಕರಣವಾಗಿದೆ. ಅದಕ್ಕಾಗಿಯೇ ಅಧೀನ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ವಿಚಾರಣೆಯನ್ನು ಆಗಸ್ಟ್‌ 1ಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿಗಳ ಆಪ್ತರು ಎನ್ನಲಾದ ಮರೀಗೌಡ ವಿರುದ್ಧ ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇವರ ನಿರೀಕ್ಷಣಾ ಜಾಮೀನನ್ನು ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.