ADVERTISEMENT

ಜನಹಿತ ಮರೆತ ಸಿ.ಎಂ.ಸಿದ್ದರಾಮಯ್ಯ

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2016, 19:40 IST
Last Updated 10 ಫೆಬ್ರುವರಿ 2016, 19:40 IST
ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಸಿ.ವೆಂಕಟೇಶ್‌, ಶಾಸಕ ಎಸ್‌.ಮುನಿರಾಜು, ಸಚಿವ ಸದಾನಂದಗೌಡ, ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಮರಿಸ್ವಾಮಿ ಚಿತ್ರದಲ್ಲಿದ್ದಾರೆ
ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಸಿ.ವೆಂಕಟೇಶ್‌, ಶಾಸಕ ಎಸ್‌.ಮುನಿರಾಜು, ಸಚಿವ ಸದಾನಂದಗೌಡ, ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಮರಿಸ್ವಾಮಿ ಚಿತ್ರದಲ್ಲಿದ್ದಾರೆ   

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಹಿತ ಮರೆತು ಜನರ ಜೀವನದ ಜತೆ ಚೆಲ್ಲಾಟ ಆಡಲು ಹೊರಟಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸೋಮಶೆಟ್ಟಿಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣವರದಲ್ಲಿ ಬುಧವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

‘ಸಿದ್ದರಾಮಯ್ಯ ಅವರ ಉತ್ತಮ ಯೋಜನೆಗಳನ್ನು ರೂಪಿಸುವುದು ಬಿಟ್ಟು ವ್ಯಂಗ್ಯದ ಮಾತುಗಳನ್ನಾಡುತ್ತ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವ ಜತೆಗೆ ಪಕ್ಷವನ್ನು ಬಲಪಡಿಸಿ’ ಎಂದು ಮನವಿ ಮಾಡಿದರು.

ಕಾನೂನು ಸಚಿವ ಸದಾನಂದಗೌಡ ಮಾತನಾಡಿ, ‘ಭಾರತ ಇಡೀ ವಿಶ್ವದ ಗಮನ ಸೆಳೆಯುವ ರೀತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯಿಂದ ಮಾಡಿದ ಅಭಿವೃದ್ಧಿ ಕೆಲಸಗಳಿಗೆ ಮತ್ತೆ ಚಾಲನೆ ದೊರೆಯಬೇಕಾದರೆ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ’ ಎಂದರು.

‘ಹತ್ತು ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್‌ ಲೂಟಿ ಮಾಡುವ ಮೂಲಕ ದೇಶಕ್ಕೆ ಅಪಮಾನ ಮಾಡುವ ಕೆಲಸಗಳನ್ನು ಮಾಡಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.