ADVERTISEMENT

ತಿಂಗಳಿಗೆ ₹18,000 ವೇತನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 19:33 IST
Last Updated 7 ಡಿಸೆಂಬರ್ 2017, 19:33 IST

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಚಾಲಕರಿಗೆ ತಿಂಗಳಿಗೆ ₹18,000 ವೇತನ ನೀಡುವಂತೆ ಒತ್ತಾಯಿಸಿ ‘ರಾಜ್ಯ ಸರ್ಕಾರ ಹಾಗೂ ಅಧೀನದ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ’ ಪದಾಧಿಕಾರಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯದಾದ್ಯಂತ 500ಕ್ಕೂ ಹೆಚ್ಚು ಚಾಲಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸದ್ಯ ₹8,000ದಿಂದ ₹10,000 ವೇತನ ನೀಡಲಾಗುತ್ತಿದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಶಾಮೀಲಾಗಿ ಅವರ ಹೆಸರಿನಲ್ಲಿ ಹಣ ಪಡೆದು ವಂಚಿಸುತ್ತಿದ್ದಾರೆ’ ಎಂದು ಮನವಿಯಲ್ಲಿ ದೂರಿದ್ದಾರೆ.

‘ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು. ತಿಂಗಳಿಗೆ ₹18,000 ವೇತನವು ಖಜಾನೆಯಿಂದ ನೇರವಾಗಿ ಚಾಲಕರ ಕೈಗೆ ಸಿಗುವಂತೆ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಚಾಲಕರ ವೇತನದಲ್ಲಿ ಕಡಿತಗೊಳಿಸುತ್ತಿರುವ ಫಿ.ಎಫ್‌ ಹಾಗೂ ಇ.ಎಸ್.ಐ ಹಣವನ್ನು ಗುತ್ತಿಗೆದಾರರು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.