ADVERTISEMENT

ದಮನಿತರಿಗೆ ಪುನರ್ವಸತಿ ನಿರ್ಲಕ್ಷ್ಯ ಎಸ್‌ಎಚ್‌ಆರ್‌ಸಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 19:50 IST
Last Updated 22 ಮಾರ್ಚ್ 2018, 19:50 IST

ಬೆಂಗಳೂರು: ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿರುವ ಅಪ್ರಾಪ್ತ ಮತ್ತು ಅಂಗವಿಕಲ ಹೆಣ್ಣು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶಿಸಿದೆ.

ವಿಧಾನ ಪರಿಷತ್ತಿನ ಸದಸ್ಯೆ ಜಯಮಾಲಾ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ‘ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿಗಳ ಅಧ್ಯಯನ ಸಮಿತಿಯು 2017ರ ಫೆಬ್ರುವರಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ ದಮನಿತರಿಗೆ ಪುನರ್ವಸತಿ ಕಲ್ಪಿಸಲು ಶಿಫಾರಸು ಮಾಡಿದೆ. ಆದರೂ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿ ಮಾನವ ಹಕ್ಕುಗಳ ಆಯೋಗಕ್ಕೆ ಸಮಿತಿಯ ಸದಸ್ಯೆ ರೂಪ ಹಾಸನ ದೂರು ಸಲ್ಲಿಸಿದ್ದರು.

‘ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿರುವ ನೋಂದಾಯಿತ ಒಂದು ಲಕ್ಷದಷ್ಟು ದಮನಿತರದಲ್ಲಿ ಶೇ 72ರಷ್ಟು ಮಹಿಳೆಯರು ಪುನರ್ವಸತಿ ಬಯಸಿದ್ದಾರೆ. ಇವರಲ್ಲಿ ಸಾವಿರಾರು ಅಪ್ರಾಪ್ತ ಹೆಣ್ಣು ಮಕ್ಕಳು, ಅಂಗವಿಕಲರು, ಎಚ್‌ಐವಿ ಸೋಂಕಿತರೂ ಇದ್ದಾರೆ. ಅನಿವಾರ್ಯ ಕಾರಣಗಳಿಂದ ಈ ಕೆಲಸ ಮಾಡುತ್ತಿದ್ದು, ಹೊರ ಬರಲು ಪುನರ್ವಸತಿ ಕಲ್ಪಿಸಬೇಕು’ ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ADVERTISEMENT

ದೂರು ದಾಖಲಿಸಿಕೊಂಡಿರುವ ಆಯೋಗ ಏಪ್ರಿಲ್‌ 21ರೊಳಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದೇ ದೂರನ್ನು ರೂಪ ಹಾಸನ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು, ದೂರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೇಳಲಾಗಿದೆ ಎಂದು ಹಿಂಬರಹ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.