ADVERTISEMENT

ಪರ್ಯಾಯ ನ್ಯಾಯದಾನ ಇರಲಿ

ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ಅಭಿಮತ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2015, 20:14 IST
Last Updated 30 ಡಿಸೆಂಬರ್ 2015, 20:14 IST

ಬೆಂಗಳೂರು: ‘ಎಲ್ಲ ವಿಚಾರಕ್ಕೂ ನ್ಯಾಯಾಲಯಗಳ ಮೆಟ್ಟಿಲೇರುವ ಪ್ರವೃತ್ತಿ ಕೈಬಿಡಬೇಕು, ಪರ್ಯಾಯ ನ್ಯಾಯದಾನ ವ್ಯವಸ್ಥೆಗಳನ್ನು ಇನ್ನಷ್ಟು ರೂಪಿಸಬೇಕು’ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಅಖಿಲ ಭಾರತ ಅಧಿವಕ್ತಾ ಪರಿಷತ್ (ಎಬಿಎಪಿ - ವಕೀಲರ ಸಂಘಟನೆ) ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ ಕೇಂದ್ರದಲ್ಲಿ ಆಯೋಜಿಸಿರುವ 14ನೇ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯಾಲಯಗಳ ವ್ಯಾಪ್ತಿಯಲ್ಲಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕು. ನ್ಯಾಯಾಲಯಗಳ ಮೆಟ್ಟಿಲೇರುವ ಬಡವರು ಕಡಿಮೆ ಖರ್ಚಿನಲ್ಲಿ ನ್ಯಾಯ ಪಡೆಯುವಂತೆ ಆಗಬೇಕು ಎಂದು ಅವರು ಹೇಳಿದರು.

ಕರ್ನಾಟಕ ಹೈಕೋರ್ಟ್‌ ವ್ಯಾಪ್ತಿಯಲ್ಲಿ ಎರಡು ಲಕ್ಷ ಪ್ರಕರಣಗಳು ಬಾಕಿ ಇವೆ. ಇಷ್ಟು ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ 31 ಮಾತ್ರ. ನ್ಯಾಯಾಲಯಗಳು ಮಾನವ ಸಂಪನ್ಮೂಲದ ಕೊರತೆ ಎದುರಿಸುತ್ತಿವೆ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಹೇಳಿದರು.

ಹಾಲಿ ಲೋಕಸಭೆಯ ಶೇಕಡ 34ರಷ್ಟು ಸದಸ್ಯರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಆದರೆ, ಆರೋಪ ಸಾಬೀತಾಗುವವರೆಗೆ ಅವರನ್ನು ಸಂಸದ ಸ್ಥಾನದಿಂದ ಕೆಳಗಿಳಿಸಲು ಆಗುವುದಿಲ್ಲ. ಕ್ರಿಮಿನಲ್‌ ಪ್ರಕರಣಗಳಲ್ಲಿ ಸಂಸದರ ಪಾತ್ರ ಮೇಲ್ನೋಟಕ್ಕೆ ನಿಜ ಎಂಬುದು ಗೊತ್ತಾದ ತಕ್ಷಣ, ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಸಂಸತ್ತೇ ಒಂದು ನಿಯಮ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಕೆ.ಕೆ. ವೇಣುಗೋಪಾಲ್‌ ಹೇಳಿದರು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನಿವೃತ್ತ ನ್ಯಾಯಮೂರ್ತಿ ಎಂ. ರಾಮಾಜೋಯಿಸ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.