ADVERTISEMENT

ಪಿಂಚಣಿ ಸೌಲಭ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2015, 19:51 IST
Last Updated 26 ಮಾರ್ಚ್ 2015, 19:51 IST

ಬೆಂಗಳೂರು: ಹಿರಿಯ ಕಾರ್ಮಿಕರಿಗೆ ಪಿಂಚಣಿ ನೀಡಬೇಕು, ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ನಿರ್ಮಾಣ ಕೆಲಸಗಾರರ ಕೇಂದ್ರ ಒಕ್ಕೂಟದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ಜಾಥಾ ನಡೆಸಿದರು. ಒಕ್ಕೂಟದ ಅಧ್ಯಕ್ಷ ಎನ್‌.ಪಿ.ಸ್ವಾಮಿ ಮಾತನಾಡಿ, ‘ಕಾರ್ಮಿಕರ ಅನುಕೂಲಕ್ಕಾಗಿ ಸರ್ಕಾರ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿದೆ. ಆದರೆ, ಅಧಿಕಾರಿಗಳು ಯೋಜನೆಗಳನ್ನು ಸಮರ್ಪಕವಾಗಿ ಕಾರ್ಮಿಕರಿಗೆ ತಲುಪಿಸುತ್ತಿಲ್ಲ’ ಎಂದು ದೂರಿದರು.

ಹಿರಿಯ ಕಾರ್ಮಿಕರು ಪಿಂಚಣಿಗೆ ಅರ್ಜಿ ಸಲ್ಲಿಸಿ ಆರು ತಿಂಗಳು ಕಳೆದಿವೆ. ಆದರೂ ಪಿಂಚಣಿ ದೊರೆತಿಲ್ಲ. ಕೂಡಲೇ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವೈದ್ಯಕೀಯ ನೆರವು, ವಿವಾಹಕ್ಕೆ ಧನ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರದ ಮೊತ್ತವನ್ನು₹ 2 ಲಕ್ಷದಿಂದ₹ 5 ಲಕ್ಷಕ್ಕೆ ಹೆಚ್ಚಿಸಬೇಕು. ಕಟ್ಟ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಉಚಿತ ಸಹಾಯವಾಣಿ ಸ್ಥಾಪಿಸಬೇಕು. ಇಎಸ್‌ಐ ಆಸ್ಪತ್ರೆಗಳಿಲ್ಲದ ಕಡೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್‌ ಅವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ನಂತರ ಕಾರ್ಮಿಕರು  ಪ್ರತಿಭಟನೆ ನಿಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.