ADVERTISEMENT

ಪ್ರಧಾನಿ, ಮರ್ಕೆಲ್‌ ಭೇಟಿ: ಬಿಗಿ ಬಂದೋಬಸ್ತ್

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2015, 20:12 IST
Last Updated 4 ಅಕ್ಟೋಬರ್ 2015, 20:12 IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್‌ ಅವರು ನಗರಕ್ಕೆ ಬರುತ್ತಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಈ ಸಂಬಂಧ ಡಿಜಿಪಿ ಓಂಪ್ರಕಾಶ್ ಅವರು ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು. ‘ಗರುಡಾ ಪಡೆ ಸೇರಿದಂತೆ ಭದ್ರತೆಗಾಗಿ 12 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಗಣ್ಯರು ಸಂಚರಿಸುವ ಮಾರ್ಗಗಳಲ್ಲಿ ವಾಹನಗಳ ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್‌.ಎಸ್‌. ಮೇಘರಿಕ್ ತಿಳಿಸಿದರು.

ಎರಡು ಕಾರ್ಯಕ್ರಮಗಳಲ್ಲಿ ಭಾಗಿ: ಮೋದಿ ಅವರು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮೊದಲಿಗೆ ಆಡುಗೋಡಿಯಲ್ಲಿರುವ ಬಾಷ್ ಕಂಪೆನಿಗೆ ಮರ್ಕೆಲ್ ಅವರೊಂದಿಗೆ ಭೇಟಿ ನೀಡಲಿರುವ ಪ್ರಧಾನಿ, ನಂತರ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿರುವ ‘ಸಾಫ್ಟ್‌ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ’ದ (ನಾಸ್ಕಾಂ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮರ್ಕೆಲ್ ಅವರು, ರಾತ್ರಿ ತಾಜ್ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಪ್ರಧಾನಿ ಮೋದಿ ಅವರು ಅ. 6 ರಂದು ಬೆಳಿಗ್ಗೆ 9.30ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ಬಾಷ್ ಕಂಪೆನಿಗೆ ಭೇಟಿ ನೀಡಲಿದ್ದಾರೆ. ನಂತರ 11 ಗಂಟೆಗೆ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನಡೆಯಲಿರುವ ನಾಸ್ಕಾಂ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ  2.30ಕ್ಕೆ ದೆಹಲಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.