ADVERTISEMENT

ಭ್ರಷ್ಟಾಚಾರ ಪ್ರಕರಣಗಳಲ್ಲಿ ಮೂರು ತಿಂಗಳ ಒಳಗೆ ಕ್ರಮ: ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 20:30 IST
Last Updated 24 ಮಾರ್ಚ್ 2017, 20:30 IST

ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ಮತ್ತು  ನೌಕರರ ವಿರುದ್ಧ ಕ್ರಮ ಜರುಗಿಸಲು ಮೂರು ತಿಂಗಳೊಳಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಖುಂಟಿಆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಮತ್ತು ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಸುತ್ತೋಲೆ ಕಳುಹಿಸಿದ್ದಾರೆ.

‘ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನೌಕರರ ವಿರುದ್ಧ (ಮೇಲ್ನೋಟಕ್ಕೆ ಆರೋಪದಲ್ಲಿ ಹುರುಳಿದೆ ಎಂದು ಕಂಡುಬಂದರೆ) ಮೂರು ತಿಂಗಳೊಳಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದ್ದು, ಸಕ್ಷಮ ಪ್ರಾಧಿಕಾರಗಳು ಅದರಂತೆ  ನಡೆದುಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಡಾ.ವಿ.ಎಲ್. ನಂದೀಶ್‌ ಮತ್ತು ಕರ್ನಾಟಕ ಲೋಕಾಯುಕ್ತರ ನಡುವಿನ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌, ಲೋಕಾಯುಕ್ತ ಪ್ರಕರಣಗಳಲ್ಲಿ ಸಕ್ಷಮ ಪ್ರಾಧಿಕಾರಗಳು 3 ತಿಂಗಳೊಳಗೆ ಅಗತ್ಯ ಕ್ರಮ ಕೈಗೊಳ್ಳಲು ಅನುಮತಿ ನೀಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದೆ.
ಈ ಸಂಬಂಧದ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ಅದು ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.