ADVERTISEMENT

ರಾಘವೇಶ್ವರ ಶ್ರೀಗಳಿಗೆ ಹೈಕೋರ್ಟ್ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 28 ಜುಲೈ 2016, 19:36 IST
Last Updated 28 ಜುಲೈ 2016, 19:36 IST

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಜಾಗವನ್ನು ಅತಿಕ್ರಮಣ ಮಾಡಲಾಗಿದೆ’ ಎಂಬ ಆರೋಪದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಬೆಂಗಳೂರಿನ ಪವನ ಪ್ರಸಾದ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ವಿಭಾಗೀಯ ಪೀಠವು ಬುಧವಾರ ವಿಚಾರಣೆ ನಡೆಸಿತು.

‘ಗಿರಿನಗರದಲ್ಲಿ ಬಿಬಿಎಂಪಿಗೆ ಸೇರಿದ ಜಾಗವನ್ನು ಶ್ರೀಮಠ ಅತಿಕ್ರಮಣ ಮಾಡಿದೆ. ಈ ಸಂಗತಿಯನ್ನು   ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವೇ (ಬಿಡಿಎ) ಮಾಹಿತಿ ಹಕ್ಕು ಕಾಯ್ದೆಯಡಿ ಸ್ಪಷ್ಟಪಡಿಸಿದೆ. ಆದ್ದರಿಂದ ಈ ಪ್ರದೇಶದಲ್ಲಿ ಶ್ರೀ ಮಠದ ಕಟ್ಟಡವೂ ಸೇರಿದಂತೆ ಅತಿಕ್ರಮಣ ಮಾಡಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡಿಎ ಈಗಾಗಲೇ ಬಿಬಿಎಂಪಿಗೆ ಸೂಚಿಸಿದೆ. ಆದರೂ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂಬುದು ಅರ್ಜಿದಾರರ ಆರೋಪ.

ಪ್ರಕರಣದಲ್ಲಿ ಬಿಬಿಎಂಪಿ, ಬಿಡಿಎ ಮತ್ತು ಬಿಎಂಟಿಎಫ್‌ (ಬೆಂಗಳೂರು ಮೆಟ್ರೊಪಾಲಿಟನ್‌ ಟಾಸ್ಕ್‌ಫೋರ್ಸ್‌) ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.