ADVERTISEMENT

ರಾಜ್ಯಪಾಲರಿಗೆ ಮತ್ತೆ ಸುಗ್ರೀವಾಜ್ಞೆ ಪ್ರಸ್ತಾವನೆ: ಸಚಿವ ಆಂಜನೇಯ

​ಪ್ರಜಾವಾಣಿ ವಾರ್ತೆ
Published 28 ಮೇ 2016, 19:34 IST
Last Updated 28 ಮೇ 2016, 19:34 IST

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕಾಮಗಾರಿಗಳ ಟೆಂಡರ್‌ನಲ್ಲಿ ವಿಶೇಷ ಮೀಸಲಾತಿ ನೀಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಮತ್ತೊಮ್ಮೆ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಕಳುಹಿಸಿಕೊಡಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತರುವ ಬದಲು ಜುಲೈ ತಿಂಗಳಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ತಿದ್ದುಪಡಿ ತರುವಂತೆ ರಾಜ್ಯಪಾಲರು ಸೂಚಿಸಿದ್ದರು. ಮೇ ಮತ್ತು ಜೂನ್‌ ತಿಂಗಳಲ್ಲಿ ಎಲ್ಲಾ ಇಲಾಖೆಗಳ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತದೆ.    ಜುಲೈವರೆಗೆ ಕಾದರೆ ಈ ವರ್ಷದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಈ ಸವಲತ್ತು ಸಿಗುವುದಿಲ್ಲ. ಹಾಗಾಗಿ ಶನಿವಾರವೇ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸುತ್ತೇವೆ’ ಎಂದರು.

‘ನಾನು ಅಥವಾ ಕಾನೂನು ಸಚಿವರು ರಾಜ್ಯಪಾಲರನ್ನು ಭೇಟಿ ಮಾಡಿ, ತುರ್ತಾಗಿ  ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯದ ಬಗ್ಗೆ ಮನವರಿಕೆ ಮಾಡುತ್ತೇವೆ’ ಎಂದರು.

‘ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಕೋರಿ ಪತ್ರ ಬರೆದಿದ್ದೇನೆ. ಇನ್ನೂ ಪ್ರತಿಕ್ರಿಯೆ ಬಂದಿಲ್ಲ’ ಎಂದರು.

‘ರಾಜ್ಯಪಾಲರು ದಲಿತರ ಬಗ್ಗೆ ಕಾಳಜಿ ಹೊಂದಿದ್ದಾರೆ. ದಲಿತರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗುವ ಈ ಸುಗ್ರಿವಾಜ್ಞೆ ಪ್ರಸ್ತಾವನೆಗೆ ಸಹಿ ಹಾಕುತ್ತಾರೆ ಎಂಬ ವಿಶ್ವಾಸ ಇದೆ’ ಎಂದರು.

‘ಕೆಟಿಟಿಪಿ ಕಾಯ್ದೆ ತಿದ್ದುಪಡಿಗೆ  ಹಣಕಾಸು ಇಲಾಖೆ, ಕಾನೂನು ಇಲಾಖೆಗಳಿಂದ ಒಪ್ಪಿಗೆ ಸಿಗುವಾಗ ವಿಳಂಬವಾಯಿತು. ಹಾಗಾಗಿ ಈ ಆರ್ಥಿಕ ವರ್ಷ ಆರಂಭಕ್ಕೆ ಮುನ್ನವೇ ಕಾಯ್ದೆಗೆ ತಿದ್ದುಪಡಿ ತರಲು ಸಾಧ್ಯವಾಗಲಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೆಟಿಟಿಪಿ ಕಾಯ್ದೆ ತಿದ್ದುಪಡಿಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ಇತ್ತೀಚೆಗೆ ಹಿಂದಕ್ಕೆ ಕಳುಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.