ADVERTISEMENT

ವಿದ್ಯಾರ್ಥಿಗಳಿಂದ ರಸ್ತೆ ತಡೆ

ಅತಿಥಿ ಉಪನ್ಯಾಸಕರ ಮುಷ್ಕರದಿಂದ ನಡೆಯದ ತರಗತಿಗಳು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2016, 19:57 IST
Last Updated 8 ಫೆಬ್ರುವರಿ 2016, 19:57 IST
ವಿದ್ಯಾರ್ಥಿಗಳು ಎನ್‌ಇಎಸ್‌ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು
ವಿದ್ಯಾರ್ಥಿಗಳು ಎನ್‌ಇಎಸ್‌ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಅತಿಥಿ ಉಪನ್ಯಾಸಕರು ಮುಷ್ಕರದಲ್ಲಿ ಪಾಲ್ಗೊಂಡು ತರಗತಿಗಳಿಗೆ ಹಾಜರಾಗದ ಕಾರಣ ತರಗತಿಗಳು ನಡೆಯದೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ  ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ತರಗತಿಗಳನ್ನು ಬಹಿಷ್ಕರಿಸಿ ಎನ್‌ಇಎಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತರಗತಿಗಳು ನಡೆಯದೆ ಒಂದು ತಿಂಗಳಿಂದ ಕೇವಲ ಒಂದೆರೆಡು ತರಗತಿಗಳಿಗೆ ಹಾಜರಾಗಿ ವಾಪಸ್‌ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

‘ತರಗತಿಗಳು ಸರಿಯಾಗಿ ನಡೆಯದ ಕಾರಣ ಪರೀಕ್ಷೆಗಳಿಗೆ ಹೇಗೆ ಸಿದ್ಧತೆ ನಡೆಸಬೇಕು ಎಂದು ತೋಚುತ್ತಿಲ್ಲ. ಆದ್ದರಿಂದ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಬಿ.ಕಾಂ ಮೊದಲ ವರ್ಷದ ವಿದ್ಯಾರ್ಥಿನಿ ಬಿ.ಎನ್‌. ಸುಷ್ಮಾ ಆಗ್ರಹಿಸಿದರು.
‘ಒಂದು ತಿಂಗಳಿಂದ ತರಗತಿಗಳು ನಡೆಯದೆ ಬಿ.ಕಾಂ ಪದವಿಯ ಸುಮಾರು 2000 ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ವಿದ್ಯಾರ್ಥಿಗಳು ಜಾಥಾ ನಡೆಸಿ, ತಹಶೀಲ್ದಾರ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ನೀಡಲು ನಿರ್ಧರಿಸಲಾಗಿದೆ’ ಎಂದು ಬಿ.ಕಾಂ ಮೊದಲ ವರ್ಷದ ವಿದ್ಯಾರ್ಥಿನಿ ವಿದ್ಯಾರ್ಥಿನಿ ಎನ್‌.ಚೈತ್ರಾ ತಿಳಿಸಿದರು.

ರಸ್ತೆತಡೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು, ವಿದ್ಯಾರ್ಥಿಗಳ ಮನವೊಲಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.