ADVERTISEMENT

ವಿಧಾನ ಪರಿಷತ್‌ ಚುನಾವಣೆ: ಅಂತಿಮಗೊಳ್ಳದ ಬಿಜೆಪಿ ಪಟ್ಟಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2015, 19:39 IST
Last Updated 1 ಡಿಸೆಂಬರ್ 2015, 19:39 IST

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಕಸರತ್ತು ಮುಂದುವರಿದಿದೆ.

ಮಂಗಳವಾರ ಅಭ್ಯರ್ಥಿಗಳ  ಅಂತಿಮ ಪಟ್ಟಿ ಸಿದ್ಧಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕೆಲವು ಕ್ಷೇತ್ರಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಆಕಾಂಕ್ಷಿಗಳು ಇರುವುದರಿಂದ   ವರಿಷ್ಠರ ಜತೆ ಸಮಾಲೋಚನೆ ನಡೆಸಿ ಹೆಸರುಗಳನ್ನು ಅಂತಿಮಗೊಳಿಸಲು ಚುನಾವಣಾ ಸಮಿತಿ ನಿರ್ಧರಿಸಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಿಲ್ಲಾ ಘಟಕದ ಅಧ್ಯಕ್ಷ  ಬಿ.ಸಿ.ನಾರಾಯಣಸ್ವಾಮಿ ಹಾಗೂ ಮಾಜಿ ಅಧ್ಯಕ್ಷ ಬಿ.ಎಂ.
ನಾರಾಯಣಸ್ವಾಮಿ ಅವರಿಬ್ಬರ ಪೈಕಿ ಒಬ್ಬರಿಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ. ಕೋಲಾರ– ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಸುರೇಂದ್ರ ಗೌಡ ಹಾಗೂ ರಾಮೇಗೌಡ ಅವರ ಹೆಸರುಗಳು ಮಂಗಳವಾರ ನಡೆದ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಆಗಿವೆ.

‘ಪಕ್ಷದ ಅಧ್ಯಕ್ಷ ಪ್ರಹ್ಲಾದ ಜೋಶಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್‌, ಸಂಸದ ಬಿ.ಎಸ್‌. ಯಡಿಯೂರಪ್ಪ  ಅವರು ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.  ಬಳ್ಳಾರಿ ಕ್ಷೇತ್ರದ ಹೆಸರನ್ನು ಅಂತಿಮಗೊಳಿಸುವ ಮುನ್ನ ಸಂಸದ ಶ್ರೀರಾಮುಲು ಅವರ ಜತೆಯೂ ಚರ್ಚಿಸಬೇಕಾಗುತ್ತದೆ. ಅವರೆಲ್ಲ  ಶನಿವಾರ ರಾಜ್ಯಕ್ಕೆ ಮರಳಲಿದ್ದಾರೆ. ಆ ಬಳಿಕವೇ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುವುದು’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.