ADVERTISEMENT

‘ಮಹಿಳಾ ದೂರು ಸಮಿತಿ ರಚಿಸಲು ಸೂಚನೆ’

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2016, 19:30 IST
Last Updated 6 ಫೆಬ್ರುವರಿ 2016, 19:30 IST

ಬೆಂಗಳೂರು: ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಮಹಿಳಾ ದೂರು ಸಮಿತಿಗಳನ್ನು ರಚಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಪಾಲಯ್ಯ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಾದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರಗಳನ್ನು ಸಂಪರ್ಕಿಸಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಹೇಳಿದರು.

‘ಅತ್ಯಾಚಾರ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ, ವರ್ಗದವರು ದೂರು ನೀಡಲು ಮುಂದೆ ಬರುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಮಾಹಿತಿ  ಸಂಗ್ರಹಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು’ ಎಂದರು.

‘ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ವಿ.ಎಸ್.ಉಗ್ರಪ್ಪ ನೇತೃತ್ವದ ಮಕ್ಕಳ ಮತ್ತು ಮಹಿಳೆಯರ ಶೋಷಣೆ, ದೌರ್ಜನ್ಯ ಹಾಗೂ ಅತ್ಯಾಚಾರ ನಿಯಂತ್ರಣ ಕುರಿತ ತಜ್ಞರ ಸಮಿತಿಯು ಸೂಚಿಸಿದೆ. ಹೀಗಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ರಮೇಶ್ ಮಾತನಾಡಿ, ‘ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಗಟ್ಟಲು ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ’ ಎಂದು ಹೇಳಿದರು.

ಝೈಕಾ: ಮುನ್ನೆಚ್ಚರಿಕೆ  ವಹಿಸಿ
‘ದಕ್ಷಿಣ ಅಮೆರಿಕದ ಹಲವು ರಾಷ್ಟ್ರಗಳಲ್ಲಿ ಝೈಕಾ ವೈರಸ್‌ ವ್ಯಾಪಕವಾಗಿ ಹರಡುತ್ತಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಮೀಪ ಇರುವುದರಿಂದ ವಿದೇಶಿ ಪ್ರಯಾಣಿಕರ ಮೂಲಕ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ  ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಪಾಲಯ್ಯ ಹೇಳಿದರು.

‘ಜಿಲ್ಲೆಯಲ್ಲಿ ಈವರೆಗೆ ಝೈಕಾ ವೈರಸ್ ಪತ್ತೆಯಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದರು.

‘ಸೋಂಕು ತಗುಲಿದರೆ 7 ರಿಂದ  14 ದಿನಗಳವರೆಗೆ ಜ್ವರ, ಗಂಟಲು ನೋವು ಕಂಡು ಬರುತ್ತದೆ. ಈ ಲಕ್ಷಣ ಕಂಡ ಕೂಡಲೇ ತಪಾಸಣೆಗೆ ಒಳಗಾಗಬೇಕು. ಅಲ್ಲದೇ, ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಡಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.