ADVERTISEMENT

ಪೌರ ಕಾರ್ಮಿಕರ ವೇತನ 2–3 ವಾರದಲ್ಲಿ ಪಾವತಿ

ಹೈಕೋರ್ಟ್‌ಗೆ ಬಿಬಿಎಂಪಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ಬೆಂಗಳೂರು: ‘ಬೃಹತ್ ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ವೇತನವನ್ನು 2–3 ವಾರಗಳಲ್ಲಿ ಪಾವತಿಸಲಾಗುವುದು’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಎಸ್‌.ಎನ್‌.ಬಾಲಸುಬ್ರಮಣಿಯಂ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಲಿಖಿತ ಆಕ್ಷೇಪಣೆ ಸಲ್ಲಿಸಿ, ‘ಪೌರಕಾರ್ಮಿಕರಿಗೆ ಬ್ಯಾಂಕ್ ಖಾತೆಗಳ ಮೂಲಕ ನೇರವಾಗಿ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

‘ಪೌರಕಾರ್ಮಿಕರಿಗೆ ಗುತ್ತಿಗೆದಾರರು ಸೂಕ್ತ ರೀತಿಯಲ್ಲಿ ವೇತನ ಪಾವತಿ ಮಾಡುತ್ತಿಲ್ಲ ಎಂಬ ಬಗ್ಗೆ ದೂರು ಕೇಳಿ ಬಂದಿದ್ದವು. ಇದರಿಂದ ರಾಜ್ಯದಾದ್ಯಂತ ಬ್ಯಾಂಕ್ ಖಾತೆ ಮೂಲಕ ನೇರವಾಗಿ ವೇತನ ಪಾವತಿಸಬೇಕು ಎಂದು ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿ 2017ರ ಆಗಸ್ಟ್‌ 7ರಂದು ಸರ್ಕಾರ ಆದೇಶಿಸಿದೆ’ ಎಂದು ಅವರು ವಿವರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಪೌರ ಕಾರ್ಮಿಕರನ್ನು ನೇರವಾಗಿ ಕೆಲಸಕ್ಕೆ ನೇಮಿಸಿಕೊಳ್ಳುವುದಕ್ಕಾಗಿ ಗುತ್ತಿಗೆ ಕಾರ್ಮಿಕರನ್ನು ನೇರವಾಗಿ ನೇಮಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ 2017ರ ಅಕ್ಟೋಬರ್ 27ರಂದು ಹೊರಡಿಸಲಾಗಿರುವ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.