ADVERTISEMENT

ಧರ್ಮಸಿಂಗ್‌, ಖಂಡ್ರೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2017, 6:51 IST
Last Updated 30 ಜನವರಿ 2017, 6:51 IST
ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದರ್‌ನಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್  ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು
ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೀದರ್‌ನಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು   
ಬೀದರ್: ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಪರಿಶಿಷ್ಟ ಜಾತಿ(ಬಲಗೈ) ಸಮುದಾಯದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
 
ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದ ಬಳಿ ಜಮಾಯಿಸಿದ ಒಕ್ಕೂಟದ ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌ ಅವರ  ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್‌ ನಗರಾಭಿವೃದ್ಧಿ  ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಅರವಿಂದ ಅರಳಿ ಅವರನ್ನು  ನೇಮಕ ಮಾಡಲು ಒಲವು ತೋರಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಈಶ್ವರ ಖಂಡ್ರೆ ಹಾಗೂ  ಧರ್ಮಸಿಂಗ್‌ ಅವರ ಕುತಂತ್ರದಿಂದಾಗಿ   ಅರವಿಂದ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.
 
ಮೀಸಲು ಕ್ಷೇತ್ರವಾದ ಔರಾದ್‌ ವಿಧಾನಸಭೆ ಕ್ಷೇತ್ರಕ್ಕೆ  ಪರಿಶಿಷ್ಟ ಜಾತಿ(ಬಲಗೈ) ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಒದಗಿಸಲಿಲ್ಲ.
 
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಂದರ್ಭದಲ್ಲೂ ಬಲಗೈ ಸಮುದಾಯದ  ಪ್ರತಿನಿಧಿಗಳನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
 
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಾಜಕುಮಾರ ಮೂಲಭಾರತಿ, ಅರುಣ ಕುದರೆ, ಜಿಲ್ಲಾ ಸಂಚಾಲಕ ಬಾಬು ಪಾಸ್ವಾನ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಭೀಮವಾದ) ಜಿಲ್ಲಾ ಸಂಚಾಲಕ ಕಲ್ಯಾಣರಾವ್‌ ಭೋಸ್ಲೆ, ದಲಿತ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್‌ ದೀನೆ, ಡಾ. ಅಂಬೇಡ್ಕರ್‌ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ರಘುನಾಥ ಗಾಯಕವಾಡ, ದಲಿತ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅಂಬಾದಾಸ ಗಾಯಕವಾಡ, ಮಹಾ ಮಾನವ ಸಂಸ್ಥೆಯ ಅಧ್ಯಕ್ಷ ಅಶೋಕ ಮಾಳಗೆ, ಪ್ರಮುಖರಾದ ಬಕ್ಕಪ್ಪ ದಂಡಿನ್‌, ಓಂಪ್ರಕಾಶ ಭಾವಿಕಟ್ಟಿ, ಶಿವಕುಮಾರ ನೀಲಿಕಟ್ಟಿ, ಕುಪೇಂದ್ರ ಶರ್ಮಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.