ADVERTISEMENT

ನೌಕರರ ಸಮಸ್ಯೆ ಪರಿಹಾರ ಯತ್ನ

ಬೀದರ್: ಆರೋಗ್ಯ ಇಲಾಖೆ ನೌಕರರ ಸಮಾವೇಶದಲ್ಲಿ ರಹೀಂಖಾನ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2017, 5:41 IST
Last Updated 11 ಮಾರ್ಚ್ 2017, 5:41 IST

ಬೀದರ್: ಆರೋಗ್ಯ ಇಲಾಖೆ ಸಿಬ್ಬಂದಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್‌ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ವತಿಯಿಂದ ನಗರದ ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 15ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಹೊಸ ಯೋಜನೆ ಹಾಗೂ ಸಮಸ್ಯೆಗಳ ಚರ್ಚೆಗೆ ಶನಿವಾರ (ಮಾ. 11) ಬೆಂಗಳೂರಿನಲ್ಲಿ ಜಿಲ್ಲೆಯ ಶಾಸಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಇಲಾಖೆ ನೌಕರರ ಸಮಸ್ಯೆಗಳ ಬಗೆಗೆ ಮುಖ್ಯಮಂತ್ರಿ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಬಿಡುಗಡೆಯಾಗದಿದ್ದರೆ ಕುಟುಂಬ ನಿರ್ವಹಣೆ ಕಷ್ಟವಾಗಲಿದೆ. ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ADVERTISEMENT

ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ಊಟದ ಮನೆ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ಅನುದಾನ ಒದಗಿಸಲಾಗುವುದು. ಎಚ್‌ಕೆಆರ್‌ಡಿಬಿಯಿಂದಲೂ ₹5 ಲಕ್ಷ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು. ಸಮುದಾಯ ಭವನ ಆವರಣದಲ್ಲಿ  ಕೊಳವೆಬಾವಿ ಕೊರೆಯಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ 7ನೇ ವೇತನ ಆಯೋಗ ರಚನೆಯನ್ನು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಆಶ್ವಾಸನೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎ. ಪುಟ್ಟಸ್ವಾಮಿ ತಿಳಿಸಿದರು.

87 ಇಲಾಖೆಗಳಲ್ಲಿಯೇ ಆರೋಗ್ಯ ಇಲಾಖೆ ಮೂರನೇ ಅತಿದೊಡ್ಡ ಇಲಾಖೆಯಾಗಿದೆ. ಇಲಾಖೆ ನೌಕರರು ಒಗ್ಗಟ್ಟಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿಯ ವೇತನ ಪಾವತಿಸಲು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವಿಳಂಬ ಮಾಡುತ್ತಿವೆ. ಹೀಗಾಗಿ ಡಿಎಚ್‌ಒ ಮೂಲಕ ಸಂಬಳ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಆರೋಗ್ಯ ಇಲಾಖೆ ಸುಪರ್ದಿಗೆ ಒಪ್ಪಿಸಬೇಕು. ಜ್ಯೋತಿ ಸಂಜೀವಿನಿ ಸೌಲಭ್ಯವನ್ನು ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗೂ ಕಲ್ಪಿಸಲು ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್. ಶ್ರೀನಿವಾಸ, ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಎ.ಜಬ್ಬಾರ್, ಬ್ರೀಮ್ಸ್‌ ಬೋಧಕ ಆಸ್ಪತ್ರೆಯ ನಿರ್ದೇಶಕ ಡಾ. ಸಿ. ಚನ್ನಣ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಿ.ಎಸ್‌. ರಗಟೆ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಮಹೇಶ ಬಿರಾದಾರ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸದಾಶಿವ ಸ್ವಾಗತಿಸಿದರು. ಖಜಾಂಚಿ ಟಿ.ಎಂ.ಮಚ್ಚೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.