ADVERTISEMENT

ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಸಿ

ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2017, 5:59 IST
Last Updated 14 ಮಾರ್ಚ್ 2017, 5:59 IST

ಬೀದರ್‌: ವಿಶೇಷ ಘಟಕ ಯೋಜನೆ(ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ)ಯಡಿ ಮೀಸಲಿಟ್ಟಿರುವ ಅನುದಾನ ಸೇರಿದಂತೆ ವಿವಿಧ ಯೋಜನೆಗಳಡಿ ಬಿಡುಗಡೆಯಾಗಿರುವ  ಅನುದಾನವನ್ನು  ಮಾರ್ಚ್‌ ಅಂತ್ಯದೊಳಗೆ ವಿನಿಯೋಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಡಾ.ಇ.ವಿ.ರಮಣರೆಡ್ಡಿ  ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಸೋಮವಾರ  ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಅಡಿ ಅನುದಾನ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ  ಕ್ರಿಮಿನಲ್‌ ಪ್ರಕರಣ ದಾಖಲು ಮಾಡಬಹುದಾಗಿದೆ. ಆದ್ದರಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆಯಿಂದ ಅನುದಾನ ಬಳಸಬೇಕು ಎಂದು ಸೂಚನೆ ನೀಡಿದರು. 

ಯೋಜನೆಯ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ  ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ತಿಳಿಸಬೇಕು. ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಕೊನೆಯ ಕ್ಷಣದವರೆಗೂ ಸುಮ್ಮನೆ ಕುಳಿತರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ 2016ರ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಬಹುತೇಕ ಕೆರೆ ಕಟ್ಟೆಗಳು ತುಂಬಿರುವ ಕಾರಣ ಈವರೆಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ ಎಂದು  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ದತ್ತಾತ್ರಿ ಪೋಲಾ ತಿಳಿಸಿದರು.

ಆದರೂ ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ 51 ಹಳ್ಳಿಗಳ ಪಟ್ಟಿ ಮಾಡಲಾಗಿದೆ. ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಜೂನ್‌ ವರೆಗೆ ಆಗುವಷ್ಟು ಮೇವಿನ ಸಂಗ್ರಹವಿದೆ. ಜೂನ್ ನಂತರ ಮಳೆ ಬರದಿದ್ದರೆ ಮಾತ್ರ  ಮೇವಿನ ಕೊರತೆಯಾಗಬಹುದು ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಹಿಂಗಾರಿನಲ್ಲಿ  ಬೆಳೆನಷ್ಟ ಆಗಿಲ್ಲ. ಈಗ ಜೋಳ ಮತ್ತು ಕುಸುಬಿ ಬೆಳೆಗಳ ಕಟಾವು ನಡೆದಿದೆ. ಹಿಂಗಾರು ಹಂಗಾಮಿನಲ್ಲಿ ಹುಮನಾಬಾದ್ ತಾಲ್ಲೂಕನ್ನು  ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ಹುಮನಾಬಾದ್  ತಾಲ್ಲೂಕಿಗೆ ಅಗತ್ಯ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ ಹೇಳಿದರು.

ಬಸವ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ವಿಶೇಷ ವಸತಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಿ ವಸತಿ ಹಂಚಿಕೆ ಮಾಡಬೇಕು  ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸೆಲ್ವಮಣಿ, ಹೆಚ್ಚುವರಿ  ಜಿಲ್ಲಾಧಿಕಾರಿ ಡಾ.ಡಿ.ಷಣ್ಮುಖ, ಬೀದರ್‌ ಉಪ ವಿಭಾಗಾಧಿಕಾರಿ ಡಾ.ಶಿವಕುಮಾರ ಶೀಲವಂತ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಶರಣಬಸಪ್ಪ ಕೊಟಪ್ಪಗೋಳ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ತಹಶೀಲ್ದಾರರು ಈ ವೇಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.