ADVERTISEMENT

ಮೇ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 16 ಮೇ 2017, 8:47 IST
Last Updated 16 ಮೇ 2017, 8:47 IST

ಬೀದರ್: ‘ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯ ಕಟ್ಟಡದ ಕಾಮಗಾರಿಯನ್ನು ಮೇ 31ರೊಳಗೆ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಆದೇಶ ಮಾಡಿದರು.

ಇಲ್ಲಿಯ ಜಿಲ್ಲಾ ಆಸ್ಪತ್ರೆ ಸಮೀಪ ನಿರ್ಮಿಸಲಾಗುತ್ತಿರುವ ಬೀದರ್‌ ವೈದ್ಯಕೀಯ  ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ನಂತರ ಅವರು ಕಾಮಗಾರಿ ಬಗೆಗೆ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದರು.

‘ಮಾರ್ಚ್‌ 31ರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು. ಆದರೆ, ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕಟ್ಟಡದಲ್ಲಿ ಈಗಲೂ ಕಾಮಗಾರಿ ಬಾಕಿ ಇದೆ. ಮೇ 31ರೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ನಾಗಾರ್ಜುನ ಕನ್‌ಸ್ಟ್ರಕ್ಷನ್‌ ಕಂಪೆನಿಗೆ ನೋಟಿಸ್‌ ಜಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ADVERTISEMENT

‘ಕಾಲೇಜಿನ ನಿರ್ದೇಶಕರು ಕಟ್ಟಡದಲ್ಲಿ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಕಾಮಗಾರಿಯ ಮೇಲೆ ನಿಗಾ ಇಡುವ ಮೂಲಕ ಆಗಾಗ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

‘ಬೀದರ್‌ನಲ್ಲಿರುವ ವೈದ್ಯಕೀಯ ಆಸ್ಪತ್ರೆಯ ಕಟ್ಟಡ, ನಿರಂತರ ಕುಡಿಯುವ ನೀರಿನ ಯೋಜನೆ ಉದ್ಘಾಟನೆ ಹಾಗೂ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಕಟ್ಟಡದ ಶಂಕುಸ್ಥಾಪನೆಗೆ ಜೂನ್‌ ಮೂರನೇ ವಾರದಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗುವುದು. ಹೆಚ್ಚುವರಿ ಕಾರ್ಮಿಕರನ್ನು ಬಳಸಿ 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು’ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಶಶಿಕಾಂತ ಮಳ್ಳಿ, ‘ಮಾರ್ಚ್‌ 31ರೊಳಗೆ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರೂ ಶೇ 20ರಷ್ಟು ಕೆಲಸ ಬಾಕಿ ಉಳಿದಿದೆ. ಗುತ್ತಿಗೆದಾರರು ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಿ ಹಗಲು ರಾತ್ರಿ ಕೆಲಸ ಮಾಡಿಸಿದರೆ ಮಾತ್ರ ಕಾಮಗಾರಿ 15 ದಿನಗಳಲ್ಲಿ ಪೂರ್ಣಗೊಳ್ಳಲು ಸಾಧ್ಯ’ ಎಂದು ಸಚಿವರಿಗೆ ಹೇಳಿದರು.

ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಸಿ.ಚನ್ನಣ್ಣ, ‘ಬ್ರೀಮ್ಸ್‌ ಆಸ್‍ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಖರೀದಿ ಮಾಡಲಾಗಿದೆ. ಕೆಲವು ಮಹತ್ವದ ಉಪಕರಣಗಳ ಖರೀದಿಗೆ ಟೆಂಡರ್‌ ಕರೆಯಲಾಗಿದೆ. ಮೇ ಅಂತ್ಯದ ವರೆಗೆ ಎಲ್ಲ ಪ್ರಕ್ರಿಯೆಗಳೂ ಪೂರ್ಣಗೊಳ್ಳಲಿವೆ’ ಎಂದು ತಿಳಿಸಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂಖಾನ್‌, ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ್, ಬ್ರೀಮ್ಸ್‌ ವಿವಿಧ ವಿಭಾಗಗಳ ಮುಖ್ಯಸ್ಥರು, ಜಿಲ್ಲಾ ಆಸ್ಪತ್ರೆಯ ವೈದ್ಯರು, ನಾಗಾರ್ಜುನ ಕನ್‌ಸ್ಟ್ರಕ್ಷನ್‌ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.