ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮೇ 2017, 6:03 IST
Last Updated 21 ಮೇ 2017, 6:03 IST

ಭಾಲ್ಕಿ: ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಅಂದಾಜು ₹ 200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರಿಜ್ ಕಂ ಬ್ಯಾರೇಜ್‌ಗಳ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು, ತನಿಖೆ ನಡೆಸಿ ಸಂಬಂಧಿತ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪದಾಧಿಕಾರಿಗಳು ಪಟ್ಟಣದಲ್ಲಿ ಶನಿವಾರ ಬೃಹತ್‌ ಪ್ರತಿಭಟನಾ ರ್‌್ಯಾಲಿ ನಡೆಸಿದರು.

ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಿ.ಕೆ.ಸಿದ್ರಾಮ್‌ ಮಾತನಾಡಿ, ‘ಸಚಿವರು ತಾಲ್ಲೂಕಿನಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜಿರಗ್ಯಾಳ, ಮಾಣಿಕೇಶ್ವರ, ಚಂದಾಪೂರ್, ಹಾಲಹಳ್ಳಿ ಬ್ರಿಜ್ ಕಂ ಬ್ಯಾರೇಜುಗಳ ದುರಸ್ತಿ ಕಾರ್ಯ ಆರಂಭಿಸಬೇಕು. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಳೆಯಿಂದ ಅಂಬೆಸಾಂಗವಿ, ಕಳಸದಾಳ, ಹುಪಳಾ ಕೆರೆ ಒಡೆದು ಬೆಳೆ ಹಾನಿ ಸೇರಿದಂತೆ ಹೊಲದಲ್ಲಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಕೂಡಲೇ ರೈತರಿಗೆ ಪರಿಹಾರ ವಿತರಿಸುವ ಕೆಲಸ ಆಗಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಮಳೆಯಿಂದ ಬೆಳೆ ಹಾನಿ ಸಂಭವಿಸಿದ ರೈತರಿಗೆ ಎಕರೆಗೆ ಕನಿಷ್ಠ ₹ 10 ಸಾವಿರ ಪರಿಹಾರ ಧನ ನೀಡಬೇಕು’ ಎಂದು ಆಗ್ರಹಿಸಿದರು. ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಕಚೇರಿಯಿಂದ ಆರಂಭವಾದ ರ್‌್ಯಾಲಿ ಮಹಾತ್ಮ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ತಾಲ್ಲೂಕು ಕಚೇರಿ ಆವರಣದಲ್ಲಿ ಸಮಾವೇಶ ಗೊಂಡಿತು.

ರ್‌್ಯಾಲಿಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುರಾವ ಕಾರಬಾರಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಮಾಶೆಟ್ಟೆ,  ಪ್ರಧಾನ ಕಾರ್ಯದರ್ಶಿ ಸೋಮನಾಥ ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದ ರಾವ ಬಿರಾದಾರ್, ಪ್ರಧಾನ ಕಾರ್ಯದರ್ಶಿ ಪ್ರತಾಪ ಪಾಟೀಲ, ಪ್ರಮುಖರಾದ ಡಾ.ಸೂರಜ್‌ಸಿಂಗ್‌ ರಜಪೂತ್, ಅಶೋಕ ತಮಾಸಂಗೆ, ಓಂ ಪ್ರಕಾಶ ರೊಟ್ಟೆ, ಶಾಂತವೀರ ಕೇಸ್ಕರ್, ದಿಗಂಬರರಾವ ಮಾನಕಾರಿ, ಅಶೋಕ ಮಡ್ಡೆ, ರಾಹುಸಾಬ್‌ ಬಿರಾದಾರ್, ಪ್ರಭುರಾವ ಧೂಪೆ, ಶ್ರೀಕಾಂತ ದಾನಿ, ಸಂಜೀವ ಪಾಟೀಲ್  ಇದ್ದರು.

* * ವಿವಿಧೆಡೆ ಕೆರೆ ಒಡೆದು ಹೊಲದಲ್ಲಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಕೂಡಲೇ ರೈತರಿಗೆ ಪರಿಹಾರ ವಿತರಿಸುವ ಕೆಲಸ ಆಗಬೇಕು

ಪ್ರಕಾಶ ಖಂಡ್ರೆ
ಮಾಜಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.