ADVERTISEMENT

ಸಚಿವ ರಾಯರಡ್ಡಿ ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 8:50 IST
Last Updated 23 ಏಪ್ರಿಲ್ 2017, 8:50 IST

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಇರುವ ಕುರಿತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಯರಡ್ಡಿ ವಿರುದ್ಧ ಘೋಷಣೆ ಕೂಗಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಸಮೀಪದ ಶಿವಾಜಿ ವೃತ್ತದ ಬಳಿ ಬಂದು ರಾಯರಡ್ಡಿ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧಿಕಾರ ಬೇಕಿದ್ದರೆ ಸಾಯಲಿ’ ಎಂದು ರಾಯರಡ್ಡಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಆಕಾಶ ಪಾಟೀಲಹೇಳಿದರು.‘ರಾಯರಡ್ಡಿ ಅವರು ಮೋದಿ ಬಗೆಗೆ ನೀಡಿರುವ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮನ್ಮಥ ಕಾಡವಾದ, ಕಾರ್ಯದರ್ಶಿ ಬಸವರಾಜ ಪಿ. ಭತಮುರ್ಗೆ, ಬಿಜೆಪಿ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಜನಾರ್ಧನ ರೆಡ್ಡಿ ಆಣದೂರು, ಕಿರಣರೆಡ್ಡಿ, ಸಂತೋಷ, ಭೀಮು ಮೈಲೂರಕರ್ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.