ADVERTISEMENT

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2017, 6:54 IST
Last Updated 20 ಏಪ್ರಿಲ್ 2017, 6:54 IST

ಚಾಮರಾಜನಗರ: ‘ನಗರದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ’ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಕಳಪೆಯಾಗಿದೆ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು. ಗುಣಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಜತೆಗೆ, ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ನಗರಸಭೆ ವ್ಯಾಪ್ತಿಯ 31ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮವಹಿಸಬೇಕು. ವಾರ್ಡ್‌ಗಳಲ್ಲಿ ಈಗಾಗಲೇ, ಪ್ರಗತಿಯಲ್ಲಿರುವ ಕುಡಿಯುವ ನೀರು ಸೇರಿದಂತೆ ಸಿ.ಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಬೇಸಿಗೆ ವೇಳೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂಬ ದೃಷ್ಟಿಯಿಂದ ನಗರದ ಎಲ್ಲ ವಾರ್ಡ್‌ಗಳಿಗೆ ಕೊಳವೆ ಬಾವಿ ಕೊರೆಯಿಸಲು ತಲಾ ₹ 1 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಸಮಸ್ಯೆ ಇರುವ ವಾರ್ಡ್‌ಗಳಲ್ಲಿ ಶೀಘ್ರವೇ ಕೊಳವೆ ಬಾವಿ ಕೊರೆಯಿಸಬೇಕು. ಜತೆಗೆ, ಎಲ್ಲ ವಾರ್ಡ್‌ಗಳಿಗೂ ಭೇಟಿ ನೀಡಿ ಅಲ್ಲಿನ ಮೂಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ADVERTISEMENT

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಆರ್.ಎಂ. ರಾಜಪ್ಪ, ಪೌರಾಯುಕ್ತ ಎಂ. ರಾಜಣ್ಣ, ಸದಸ್ಯರಾದ ಆರ್.ಪಿ. ನಂಜುಂಡಸ್ವಾಮಿ, ಚೆಂಗುಮಣಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.