ADVERTISEMENT

ನಿಗದಿತ ಗುರಿ ಸಾಧನೆಗೆ ಸೂಚನೆ

ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2016, 7:06 IST
Last Updated 25 ಜೂನ್ 2016, 7:06 IST
ಚಾಮರಾಜನಗರದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬರ ನಿರ್ವಹಣೆ ಹಾಗೂ ಇತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಚಾಮರಾಜನಗರದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬರ ನಿರ್ವಹಣೆ ಹಾಗೂ ಇತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಚಾಮರಾಜನಗರ: ಜಿಲ್ಲೆಯಲ್ಲಿ ಸಮರ್ಪ ಕವಾಗಿ ವಿವಿಧ ವಸತಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ನಿಗದಿತ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಂಭು ದಯಾಳ್ ಮೀನಾ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಯಲ್ಲಿ ಶುಕ್ರವಾರ ನಡೆದ ಬರ ನಿರ್ವಹಣೆ ಹಾಗೂ ಇತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲಮಿತಿಯಲ್ಲಿ ಬಸವ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ಸೇರಿದಂತೆ ಇತರೆ ವಸತಿ ಯೋಜನೆ ಪೂರ್ಣಗೊಳಿಸಬೇಕು. ಕೆಲವೆಡೆ ಇನ್ನೂ ಕಾಮಗಾರಿ ಪ್ರಾರಂಭ ವಾಗಿಲ್ಲ.

ಮತ್ತೆ ಕೆಲ ತಾಲ್ಲೂಕುಗಳಲ್ಲಿ ಕಾಮಗಾರಿಗಳು ಅಪೂರ್ಣಗೊಂಡಿವೆ. ಯೋಜನೆ ಸಂಬಂಧ ಅನುಷ್ಠಾನಕ್ಕೆ ಎದುರಾಗಿರುವ ಅಡಚಣೆ ಪರಿಹರಿಸಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸ ಬೇಕು ಎಂದು ತಾಕೀತು ಮಾಡಿದರು.

ಅಲ್ಲದೆ, ಪರಿಣಾಮಕಾರಿಯಾಗಿ ಫಲಾನುಭವಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ತಾ.ಪಂ.  ಇಒಗಳು ಶೀಘ್ರ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಅಗತ್ಯ ಮಾರ್ಗದರ್ಶನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿ ಗಳು ಯೋಜನೆಯ ಪ್ರಗತಿ ಪರಿಶೀಲಿಸಿ ಕಾಮಗಾರಿಗೆ ಚುರುಕು ನೀಡಬೇಕು ಎಂದು ಸೂಚಿಸಿದರು.

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲಾಖೆಗಳು ಹೆಚ್ಚು ಕಾರ್ಯಕ್ರಮ ಜಾರಿಗೊಳಿಸಬೇಕು. ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇಲಾಖೆ ಗಳು ಹೆಚ್ಚು ಕಾಮಗಾರಿ ಕೈಗೊಂಡು ಪ್ರಗತಿ ಸಾಧಿಸಲು ಅವಕಾಶಗಳಿವೆ.

ಪ್ರತಿ ಇಲಾಖೆಯ ಅಧಿಕಾರಿಗಳೂ ನರೇಗಾ ಕೆಲಸಗಳಿಗೆ ವಿಶೇಷ ಒತ್ತು ನೀಡಬೇಕು. ಪರಿಣಾಮಕಾರಿ ಅನುಷ್ಠಾನಕ್ಕಾಗಿ ಯೋಜನೆಯ ಪ್ರಗತಿ ಪರಿಶೀಲಿಸಿ ಅಗತ್ಯ ಸೂಚನೆ ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕುಡಿಯುವ ನೀರು ಯೋಜನೆಯ ಪ್ರಗತಿ ಪರಿಶೀಲಿಸಿದ ಅವರು, ನಿಗದಿತ ಅವಧಿ ಒಳಗೆ ಯೋಜನೆ ಪೂರ್ಣಗೊಳಿಸಬೇಕು. ತಾಲ್ಲೂಕು ಪಂಚಾಯಿತಿ ಇಒಗಳೊಂದಿಗೆ  ಗ್ರಾಮೀಣ ನೀರು ಪೂರೈಕೆ ಇಲಾಖೆಯ ಎಂಜಿನಿಯರ್‌ಗಳು ಸಂಪರ್ಕದಲ್ಲಿದ್ದು, ಕೊಳವೆಬಾವಿಗಳ ಮರುಪೂರಣ ಕೆಲಸ ಪೂರ್ಣಗೊಳಿಸಬೇಕು. ವಿಶೇಷ ಆದ್ಯತೆಯಾಗಿ ಈ ಕೆಲಸ ಪರಿಗಣಿಸಬೇಕು ಎಂದು ಸೂಚಿಸಿದರು.

ಕೃಷಿ, ಪಶುಸಂಗೋಪನೆ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಇಲಾಖೆ, ಇತರೆ ಇಲಾಖೆಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸ ಲಾಯಿತು. ಸಿಇಒ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಉಪಕಾರ್ಯದರ್ಶಿ ಮುನಿರಾಜಪ್ಪ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.