ADVERTISEMENT

ಲಸಿಕಾ ಕಾರ್ಯಕ್ರಮ ಬಲಪಡಿಸಲು ಒತ್ತು

ಪ್ರತಿ ಮಗುವಿಗೂ ಲಸಿಕೆ ನೀಡಿ: ಡಾ.ಕೆ.ಎಚ್‌. ಪ್ರಸಾದ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 6:30 IST
Last Updated 23 ಮಾರ್ಚ್ 2017, 6:30 IST

ಚಾಮರಾಜನಗರ: ‘ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮ ಬಲಪಡಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಪ್ರತಿ ಗುರುವಾರ ಹಾಗೂ ಉಪ ಕೇಂದ್ರಗಳಲ್ಲಿ ಎರಡನೇ ಮಂಗಳವಾರ ಲಸಿಕಾ ಕೇಂದ್ರ ನಡೆಸಿ ಎಲ್ಲ ಮಕ್ಕಳಿಗೂ ಲಸಿಕೆ ನೀಡುವ ವ್ಯವಸ್ಥೆ ಕೈಗೊಳ್ಳಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್‌ ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಹಮ್ಮಿ ಕೊಂಡಿದ್ದ ಸಾರ್ವತ್ರಿಕ ಲಸಿಕಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚು ಮಹತ್ವ ನೀಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ -2 ಡಿಗ್ರಿ ಸೆಲ್ಸಿಯಸ್‌ನಿಂದ 8 ಡಿಗ್ರಿ ಸೆಲ್ಸಿಯಸ್‌ ವರೆಗೆ ಶೀತಲ ಸರಪಳಿಯಲ್ಲಿ ಲಸಿಕೆ ಶೇಖರಿಸಿಡಬೇಕು.

ಎಲ್ಲ ವೈದ್ಯಾಧಿಕಾರಿ ಗಳು ಪ್ರತಿ ವಾರಕೊಮ್ಮೆ ಪರಿಶೀಲಿಸ ಬೇಕು. ಪ್ರತಿ ಗುರುವಾರ ನಡೆಯುವ ಲಸಿಕಾ ಕೇಂದ್ರಗಳಿಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಲಸಿಕೆಯ ಗುಣಮಟ್ಟ ಪರಿಶೀಲಿಸಬೇಕು. ಈ ಬಗ್ಗೆ ಜಿಲ್ಲಾ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ, ಮೂರು ದಿನದ ಲಸಿಕಾ ತರಬೇತಿ ಕಾರ್ಯಾಗಾರದಲ್ಲಿ ವೈದ್ಯಾಧಿಕಾರಿಗಳಿಗೆ ಪ್ರಸಕ್ತ ಸಾಲಿನಡಿ ಲಸಿಕಾ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಗಿರಿಜನ ಪ್ರದೇಶ ಒಳಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೂಕ್ತ ಕ್ರಿಯಾಯೋಜನೆ ರಚಿಸಬೇಕು ಎಂದು ಹೇಳಿದರು.

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವಿದ್ಯಾಸಾಗರ್ ಮಾತ ನಾಡಿ, ಯಾವ ಸಮಯದಲ್ಲಿ ಯಾವ ಲಸಿಕೆ ನೀಡಬೇಕು ಹಾಗೂ ಲಸಿಕೆಯಿಂದ ತಡೆಗಟ್ಟುವ ರೋಗಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಲಸಿಕಾ ಮೇಲ್ವಿಚಾರಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT