ADVERTISEMENT

ಹಿಂದಿ ಭಾಷೆ ಹೇರಿಕೆಗೆ ವಿರೋಧ

ಕೇಂದ್ರದ ವಿರುದ್ಧ ಕರವೇ ಪ್ರತಿಭಟನೆ; ಕಾಯ್ದೆ ಜಾರಿಯಾದರೆ ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2017, 9:44 IST
Last Updated 12 ಮೇ 2017, 9:44 IST
ಚಾಮರಾಜನಗರ: ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಜಿಲ್ಲಾ ಘಟಕದ ಕಾರ್ಯಕರ್ತರು ಈಚೆಗೆ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
 
ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
 
ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುತ್ತಿರುವುದು ಖಂಡನೀಯ. ಈ ನಡೆಯಿಂದ ರಾಜ್ಯದ ಮೇಲೆ ಅನಾನುಕೂಲದ ವಾತಾವರಣ ನಿರ್ಮಾಣವಾಗಲಿದೆ ಎಂದು ಆರೋಪಿಸಿದರು.
 
ಭಾರತದ 22 ಅಧಿಕೃತ ಭಾಷೆಗಳ ಪೈಕಿ ಹಿಂದಿಯೂ ಒಂದು. ಹಿಂದಿ ರಾಷ್ಟ್ರ ಭಾಷೆ ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲ. ಆದರೂ ಕೇಂದ್ರ ಸರ್ಕಾರವು ಹಿಂದಿ ಭಾಷೆ ಬಳಕೆ ಮಾಡುವಂತೆ ಸರ್ಕಾರಿ ಕಚೇರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಆಗ್ರಹಿಸಿದರು.
 
ಕನ್ನಡ ಭಾಷೆಗೆ 2 ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 8 ಜ್ಞಾನಪೀಠ ಪ್ರಶಸ್ತಿ ಪಡೆದಿದೆ. ಹಾಗಾಗಿ, ಕೇಂದ್ರ ಸರ್ಕಾರ ಕನ್ನಡ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.
 
ವೇದಿಕೆ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಪ್ರವೀಣ್‌ಕುಮಾರ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಜಯಚಂದ್ರ, ಜಿಲ್ಲಾ ಕಾರ್ಯದರ್ಶಿ ಲೋಕೇಶ್‌ ಕುಮಾರ್, ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ವಿ.ನಾಯಕ್, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ರಮೇಶ್‌ ನಾಯಕ, ಪಟ್ಟಣ ಅಧ್ಯಕ್ಷ ಸುರೇಶ್‌ ನಾಯಕ್ ಕಾರ್ಯಕರ್ತರಾದ ನವೀನ್, ಸ್ವಾಮಿ, ಚನ್ನನಾಯಕ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.