ADVERTISEMENT

ಆತ್ಮ ಸ್ಥೈರ್ಯದಿಂದ ಕೆಲಸ ಮಾಡಬೇಕಿದೆ

ಬಿಜೆಪಿ ನಗರ ಮಂಡಲ ಕಾರ್ಯಕಾರಣಿ ಸಭೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 5:21 IST
Last Updated 20 ಮಾರ್ಚ್ 2017, 5:21 IST

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕಾದ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ. ಆದ್ದರಿಂದ ಪಕ್ಷಕ್ಕಾಗಿ ದುಡಿಯುವ ಪ್ರತಿಯೊಬ್ಬ ವ್ಯಕ್ತಿಯೂ ಆತ್ಮಸ್ಥೈರ್ಯದಿಂದ ಕೆಲಸ ಮಾಡಬೇಕಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ಕಾರ್ಯಕರ್ತರಿಗೆ ಸಲಹೆ ನೀಡಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನಗರ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ‘ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಜಯ ಲಭಿಸಬೇಕಾದರೆ ತಳಮಟ್ಟದ ಕಾರ್ಯಕರ್ತರ ಶ್ರಮವೇ ಕಾರಣ. ಬಾರಿ ಮತಗಳ ಅಂತರದಿಂದ ವಿರೋಧ ಪಕ್ಷಗಳನ್ನು ನೆಲಕಚ್ಚುವಂತೆ ಮಾಡುವಲ್ಲಿ ನಮ್ಮ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ.

ಇದೇ ಹುಮ್ಮಸ್ಸಿನಲ್ಲಿ ನಮ್ಮ ಕಾರ್ಯಕರ್ತರು ಜಿಲ್ಲೆಯಲ್ಲಿ ಪಕ್ಷವನ್ನು ಸದೃಢಗೊಳಿಸಲು ಮೂಲಕ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

‘ದೇಶದಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳೇ ಕಾರ್ಯಕರ್ತರಿಗೆ ಶ್ರೀರಕ್ಷೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಪಡೆಯುವ ಸಂದರ್ಭ ಬರುತ್ತದೆ. ಆದ್ದರಿಂದ ಮೋದಿ ಅವರ ಜನಪರ ಕಾರ್ಯಗಳನ್ನು ಪ್ರತಿ ಮನೆಗೂ ತಲುಪಿಸುವ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸ ನಡೆಯಬೇಕಿದೆ’ ಎಂದರು.

‘ಸಂವಿಧಾನ ಶಿಲ್ಪಿ ಬಿ.ಆರ್‌.ಅಂಬೇಡ್ಕರ್‌ ಅವರನ್ನು ಇಲ್ಲಿಯವರೆಗೂ ಕೇವಲ ಓಟ್‌ ಬ್ಯಾಂಕ್ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅಂಬೇಡ್ಕರ್ ಅವರನ್ನು ವಿಶ್ವಮಾನವರನ್ನಾಗಿಸಿ ಇಡೀ ವಿಶ್ವಕ್ಕೆ ಪರಿಚಯಿಸಿದರು. ಅಲ್ಲದೆ ಅವರ ಅಹಿಂದ ವರ್ಗಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿ ಮಾಡುವ ಮೂಲಕ ದೇಶವನ್ನು ಅಂಬೇಡ್ಕರ್‌ ಆಶಯಗಳಂತೆ ನಿರ್ಮಾಣ ಮಾಡುವತ್ತ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ಪಕ್ಷದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕಾಂತರಾಜು, ರಾಜ್ಯ ಘಟಕದ ಕಾರ್ಯಕಾರಣಿ ಸದಸ್ಯ ಮುರಳಿ ಮೋಹನ್, ಮುಖಂಡರಾದ ಆರ್.ಶ್ರೀನಿವಾಸ್, ನಾಗಭೂಷಣ್, ಬೈರೇಗೌಡ, ಪ್ರೇಮಲೀಲಾ, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.