ADVERTISEMENT

ಎಲ್ಲರಿಗೂ ಶಿಕ್ಷಣ ಸಿಗಬೇಕು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 4:54 IST
Last Updated 15 ಏಪ್ರಿಲ್ 2017, 4:54 IST

ಶಿಡ್ಲಘಟ್ಟ: ‘ದೇಶದ ಪ್ರತಿಯೊಂದು ಮಗುವಿಗೂ ಉತ್ತಮವಾದ ಶಿಕ್ಷಣ ಸಿಕ್ಕಾಗ ಮಾತ್ರ ಅಂಬೇಡ್ಕರ್ ಅವರ ಜೀವನದ ಹೋರಾಟಕ್ಕೆ ಅರ್ಥ ಬರುತ್ತದೆ’ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್‌ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎನ್‌.ಎ.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಸವಿಸ್ತಾರವಾಗಿ ತಿಳಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‌ ರಾಮ್‌ ಅವರ ಭಾವಚಿತ್ರಗಳನ್ನು ಹೊತ್ತ ಮುತ್ತಿನ ಪಲಕ್ಕಿಗಳ ಮೆರವಣಿಗೆ ನಡೆಸಲಾಯಿತು. ವೀರಗಾಸೆ, ತಮಟೆ ವಾದನಗಳು ಜನರ ಗಮನ ಸೆಳೆದವು.

ಸೇನೆಯಲ್ಲಿ ಕಾರ್ಯನಿರ್ವಹಿಸಿರುವ ಆಂಜಿನಪ್ಪ, ಮುನಿಶಾಮಪ್ಪ ಅವರನ್ನು ಸನ್ಮಾನಿಸಲಾಯಿತು. ಪರಿಶಿಷ್ಟ ಪಂಗಡ, ಪರಿಶಿಷ್ಟ ವರ್ಗದ ನಾಲ್ಕು ಮಂದಿಗೆ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಹಶೀಲ್ದಾರ್ ಅಜಿತ್ ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್‌.ನರಸಿಂಹಯ್ಯ, ಕಾರ್ಯನಿರ್ವಾಹಣಾಧಿಕಾರಿ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಮಾಜ ಕಲ್ಯಾಣಧಿಕಾರಿ ಅನುಸೂಯಾದೇವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.