ADVERTISEMENT

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಮನ್ನಣೆ

ಜಿಲ್ಲಾ ಮಟ್ಟದ ವಿಸ್ತಾರಕರ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪ

​ಪ್ರಜಾವಾಣಿ ವಾರ್ತೆ
Published 25 ಜುಲೈ 2017, 5:18 IST
Last Updated 25 ಜುಲೈ 2017, 5:18 IST
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಆಯೋಜಿಸಿದ್ದ ವಿಸ್ತಾರಕರ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸಸಿ ನೆಟ್ಟರು
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಆಯೋಜಿಸಿದ್ದ ವಿಸ್ತಾರಕರ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸಸಿ ನೆಟ್ಟರು   

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಪ್ರಾಮಾಣಿಕ ಅಧಿಕಾರಿಗಳ ಕಾರ್ಯ ನಿರ್ವಹಣೆಗೆ ಅಡ್ಡಿಪಡಿಸುತ್ತ, ಭ್ರಷ್ಟ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪಿಸಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಿಸ್ತಾರಕ ಯೋಜನೆಯ ವಿಸ್ತಾರಕರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. 

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನೆ ಶೂನ್ಯ. ಈ ಸರ್ಕಾರದ ಕಾರ್ಯ ವೈಖರಿಗೆ ಜನ ಬೇಸತ್ತು ಹೋಗಿದ್ದಾರೆ. ಅಭಿವೃದ್ಧಿ ದಿನೇ ದಿನೇ ಕುಂಠಿತಗೊಳ್ಳುತ್ತಿದೆ. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳು ಇತ್ತೀಚೆಗೆ ಹೊರ ಬರುತ್ತಿದ್ದಂತೆ, ಬಯಲಿಗೆಳೆದ ಪ್ರಾಮಾಣಿಕ ಅಧಿಕಾರಿಗಳನ್ನು ಸರ್ಕಾರ ಬೇರೆ ಕಡೆ ವರ್ಗಾವಣೆ ಮಾಡಿ ತನ್ನ ಹುಳುಕು ಬಯಲಾಗದಂತೆ ನೋಡಿ ಕೊಂಡಿದೆ’ ಎಂದು ತಿಳಿಸಿದರು.

ADVERTISEMENT

ಅಧಿಕಾರಿಗಳ ಆತ್ಮಹತ್ಯೆ: ‘ಕಾಂಗ್ರೆಸ್‌ ಆಡಳಿತದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ದಕ್ಷ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದಿಂದ ಹಿಡಿದು ಈವರೆಗೆ ನಿರಂತರವಾಗಿ ಅಧಿಕಾರಿಗಳ ಆತ್ಮಹತ್ಯೆ ಘಟನೆಗಳು ನಡೆಯುತ್ತಲೇ ಇವೆ. ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’ ಎಂದು ದೂರಿದರು.

‘ಪಂಡಿತ್‌ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮಶತಾಬ್ದಿ ವರ್ಷದ ನಿಮಿತ್ತ ಕೈಗೊಂಡಿರುವ ವಿಸ್ತಾರಕ ಯೋಜನೆಯಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಮಾಹಿತಿ ತಲುಪಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

‘ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಲು ಶ್ರಮಿಸಲಾಗುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯವನ್ನು ಕೂಡ ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ’ ಎಂದು ತಿಳಿಸಿದರು.ಆಗಸ್ಟ್‌ 12ಕ್ಕೆ ಅಮಿತ್‌ ಷಾ ಭೇಟಿ: ‘ಪ್ರಧಾನಿ ನ

ರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅವರ ಜೋಡಿ ದೇಶದ ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಿದೆ. ಆಗಸ್ಟ್‌ 12 ಕ್ಕೆ ರಾಜ್ಯಕ್ಕೆ ಭೇಟಿ ನೀಡುವ ಅಮಿತ್‌ ಷಾ ಅವರು, ಮೂರು ದಿನಗಳ ಕಾಲ ಮುಂಬರುವ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತಂತೆ ಪಕ್ಷದ ಶಾಸಕರು, ಮುಖಂಡರೊಂದಿಗೆ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್, ಕಾರ್ಯದರ್ಶಿ ಸಿ. ಗೋಪಿನಾಥ್‌,  ಮುಖಂಡರಾದ ಹನುಮಂತಪ್ಪ, ಲಕ್ಷ್ಮೀಪತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

*
ಟಿ. ನರಸೀಪುರ ತಹಶೀಲ್ದಾರ್‌ ಸಾವಿನ ಬಗ್ಗೆ ಸ್ಥಳೀಯರು ಹತ್ಯೆಯ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೂ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ.
-ಅರವಿಂದ ಲಿಂಬಾವಳಿ,
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.