ADVERTISEMENT

ಕುಮಾರಸ್ವಾಮಿ ಸಿಎಂ ಮಾಡಲು ಬಿಎಸ್‌ಪಿ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 6:36 IST
Last Updated 17 ಮಾರ್ಚ್ 2018, 6:36 IST

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದು ಬಿಎಸ್‌ಪಿ ರಾಜ್ಯ ಘಟಕದ ಉಪಾಧ್ಯಕ್ಷ ಆರ್‌.ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 20 ಕ್ಷೇತ್ರಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಉಳಿದ 204 ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಬಿಎಸ್‌ಪಿ ಅಭ್ಯರ್ಥಿಗಳ ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷ ಬೆಂಬಲಿಸಲಿದೆ. ಅದೇ ರೀತಿಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಕ್ಷೇತ್ರಗಳಲ್ಲಿ ಬಿಎಸ್‌ಪಿ ಪಕ್ಷದ ಎಲ್ಲ ಶಾಖೆಗಳು, ಸಂಘಟನೆಗಳು ಬೆಂಬಲ ನೀಡಲಿವೆ’ ಎಂದು ಹೇಳಿದರು.

ಬಿಎಸ್‌ಪಿ ಪಕ್ಷದಿಂದ ಈಗಾಗಲೇ ಜಿಲ್ಲಾ ಸಮಿತಿ ಸಭೆ ಕರೆಯುವ ಮೂಲಕ ಜೆಡಿಎಸ್‌ ಪಕ್ಷದ ಹೊಂದಾಣಿಕೆ ಮಾಡಿಕೊಳ್ಳಲು ಆರಂಭಿಸಿದ್ದೇವೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಎಸ್‌ಪಿ ಪಕ್ಷದ ಪದಾಧಿಕಾರಿಗಳು ಜೆಡಿಎಸ್‌ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜತೆಗೆ ಬೂತ್‌ ಮಟ್ಟದಲ್ಲಿ ಜೆಡಿಎಸ್‌ ಮತ್ತು ಬಿಎಸ್‌ಪಿ ಜಂಟಿಯಾಗಿ ಜೆಡಿಎಸ್‌ ಪರವಾಗಿ ಮತಯಾಚನೆ ಮಾಡುವಂತೆ ಮತದಾರರಿಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ನಂಬಿಕೆ ನಮಗಿದೆ. ದಲಿತರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಒದಗಿಸುವ ಶಕ್ತಿ ಅವರಲ್ಲಿದೆ. ಈ ನಿಟ್ಟಿನಲ್ಲಿ ಜೆಡಿಎಸ್‌ ಪಕ್ಷದೊಂದಿಗೆ ಉತ್ತಮ ಸಂಬಂಧವನ್ನು ಬಿಎಸ್‌ಪಿ ಪಕ್ಷ ಹೊಂದಲಿದೆ ಎಂದರು.

ಬಿಎಸ್‌ಪಿ ರಾಜ್ಯ ಘಟಕದ ಕಾರ್ಯದರ್ಶಿ ಪಿ.ವಿ.ನಾಗಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್‌, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ವಿ.ಬಾಲಕೃಷ್ಣ, ತಾಲ್ಲೂಕು ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಮುಖಂಡರಾದ ಜಿ.ಆರ್‌.ನಾರಾಯಣಸ್ವಾಮಿ, ಸೋಮಶೇಖರ್‌, ಮುನಿಕೃಷ್ಣಪ್ಪ, ದ್ಯಾವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.