ADVERTISEMENT

ಗಿಡ ನೆಡುವ ಕಾರ್ಯ ನಿರಂತರವಾಗಿರಲಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2017, 8:38 IST
Last Updated 27 ಜುಲೈ 2017, 8:38 IST

ಚಿಕ್ಕಬಳ್ಳಾಪುರ: ‘ಬಯಲು ಸೀಮೆ ಜಿಲ್ಲೆಗಳಲ್ಲಿ ಅರಣ್ಯ ಪ್ರಮಾಣ ಕಡಿಮೆ ಇರುವುದರಿಂದ ಈ ಭಾಗ ಸತತ ಬರಗಾಲಕ್ಕೆ ತುತ್ತಾಗುತ್ತಿದೆ. ನಿರಂತರವಾಗಿ ಗಿಡಗಳನ್ನು ನೆಡುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ಬೆಳೆಸುವುದೇ ಮಳೆ ಕೊರತೆ ನೀಗಲು ಉಳಿದಿರುವ ಏಕೈಕ ಮಾರ್ಗ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ನಗರ ಹೊರವಲಯದ ಸೂಲಾಲಪ್ಪನ ದಿನ್ನೆಯಲ್ಲಿರುವ ಸಸ್ಯೋದ್ಯಾನದಲ್ಲಿ ವನಮಹೋತ್ಸವದ ಅಂಗವಾಗಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು

ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ನೀರಿಗಾಗಿ ಅರಣ್ಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕಳೆದ ೨೦ ವರ್ಷಗಳ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಪರಿಸರ ನಾಶದಿಂದಾಗಿ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ.

ಪರಿಣಾಮ ಅಂತರ್ಜಲಮಟ್ಟ ಕುಸಿಯುತ್ತಿದೆ. ಅರಣ್ಯವನ್ನು ಪುನರುಜ್ಜೀವನಗೊಳಿಸುವುದೇ ಈ ಸಮಸ್ಯೆಗೆ ಮದ್ದು. ಆದ್ದರಿಂದ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಿಡ ನೆಡುವುದು ನಿರಂತರ ಪ್ರಕ್ರಿಯೆಯಾಗಬೇಕು’ ಎಂದರು.

ADVERTISEMENT

ಶಾಸಕ ಡಾ.ಕೆ ಸುಧಾಕರ್ ಮಾತನಾಡಿ, ‘ಜನಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ವ್ಯಾಪಕ ಪ್ರಮಾಣದಲ್ಲಿ ಪರಿಸರ ನಾಶವಾಗುತ್ತಿದೆ. ಪರಿಣಾಮ ಹವಾಮಾನ ವೈಪರಿತ್ಯ, ಪ್ರಕೃತಿ ವಿಕೋಪಗಳಿಗೆ ನಾವು ಸಾಕ್ಷಿಯಾಗುತ್ತಿದ್ದೇವೆ. ಪರಿಸರದ ಮೇಲೆ ಮಾನವ ನಡೆಸಿದ ದೌರ್ಜನ್ಯಕ್ಕೆ ಗಿಡಗಳನ್ನು ನೆಟ್ಟು ಬೆಳೆಸುವುದೇ ಶಿಕ್ಷೆ. ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸುವುದು ಒಂದು ಅಭಿಯಾನದ ರೀತಿ ನಡೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು.

‘ಹಸಿರು ಹೆಚ್ಚಿದಷ್ಟು ಪರಿಸರ ಶುದ್ಧಿಯಾಗುತ್ತದೆ. ಮಳೆ ಕಾಲ ಕಾಲಕ್ಕೆ ಸುರಿಯುತ್ತದೆ. ಜಲ ಮೂಲಗಳು ವೃದ್ಧಿಯಾಗಿ ಕೃಷಿಗೆ ಅನುಕೂಲವಾಗುತ್ತದೆ. ವನ ಸಂಪತ್ತು ಹೆಚ್ಚಿದರೆ ಪ್ರಾಣಿ ಪಕ್ಷಿಗಳು ಸೇರಿದಂತೆ ಜೀವ ವೈವಿಧ್ಯಕ್ಕೆ ಪ್ರಯೋಜನವಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಪರಿಸರ ಕಾಳಜಿ ಕುರಿತು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 67ರಷ್ಟು ಮಳೆ ಕೊರತೆಯಾಗಿದೆ. ಆಗಸ್ಟ್‌ನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಶೀಘ್ರದಲ್ಲಿಯೇ ಹೆಬ್ಬಾಳ, ನಾಗವಾರ ಕೆರೆಗಳ ಸಂಸ್ಕರಿಸಿದ ನೀರನ್ನು ಜಿಲ್ಲೆಯ ಕೆರೆಗಳಿಗೆ ಹರಿಸುವ ಯೋಜನೆಗೆ ಚಾಲನೆ ದೊರೆಯಲಿದೆ’ ಎಂದು ಅವರು ತಿಳಿಸಿದರು.

ಪರಿಸರ ರಕ್ಷಣೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದರು.

ರಾಮಲಿಂಗಾರೆಡ್ಡಿ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್ ಕೇಶವರೆಡ್ಡಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೆ. ಮಂಜುನಾಥ್, ಜಿಲ್ಲಾಧಿಕಾರಿ ದೀಪ್ತಿ ಕಾನಡೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ ಮಂಜುನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.