ADVERTISEMENT

ಗ್ರಾಮ ಮಟ್ಟದಲ್ಲಿ ಸಹಕಾರಿ ಬ್ಯಾಂಕ್

ಕೋಲಾರ–ಚಿಕ್ಕಬಳ್ಳಾಪುರ ಸಹಕಾರಿ ಸಮಾವೇಶದಲ್ಲಿ ಸಚಿವ ರಮೇಶ್ ಕುಮಾರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2017, 9:45 IST
Last Updated 11 ಜುಲೈ 2017, 9:45 IST

ಗೌರಿಬಿದನೂರು: ‘ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಕಾರಿ ಬ್ಯಾಂಕ್‌ಗಳನ್ನು ಸ್ಥಾಪಿಸಿ ಪ್ರತಿ ಕುಟುಂಬವನ್ನು     ಸದಸ್ಯರನ್ನಾಗಿ ಮಾಡಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು.

ಪಟ್ಟಣದ ಆಚಾರ್ಯ ಕಾಲೇಜಿನ ಮೈದಾನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ  ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೋಮವಾರ ಆಯೋಜಿಸಿದ್ದ ಸಾಲ ಮನ್ನಾ ತಿರುವಳಿ ಪ್ರಮಾಣ ಪತ್ರ ವಿತರಣೆ ಹಾಗೂ ಸಹಕಾರಿ ಸಮಾವೇಶದಲ್ಲಿ ಮಾತನಾಡಿದರು.

‘ಮಹಿಳೆಯರು ಆರ್ಥಿಕವಾಗಿ ಸಬಲಗೊಳ್ಳಲು ಡಿಸಿಸಿ ಬ್ಯಾಂಕ್ ಮುಂದಿನ ದಿನಗಳಲ್ಲಿ ತಾಲ್ಲೂಕಿನ ಸ್ವ ಸಹಾಯ ಸ್ತ್ರೀ ಶಕ್ತಿ ಗುಂಪುಗಳಿಗೆ ₹ 50 ಕೋಟಿ ಸಾಲಸೌಲಭ್ಯ ನೀಡಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಇಂದಿರಾಗಾಂಧಿ 1969ರಲ್ಲಿ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿದರು. ಆದರೆ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಅದಾನಿಗೆ  ₹ 72 ಸಾವಿರ ಕೋಟಿ ಮತ್ತು ಅಂಬಾನಿಗೆ ₹ 70 ಸಾವಿರ ಕೋಟಿ ಸಾಲ ನೀಡಿದೆ’ ಎಂದು ದೂರಿದರು.

‘₹ 1 ಲಕ್ಷ ದಿಂದ 2 ಲಕ್ಷ ಸಾಲ ಸೌಲಭ್ಯ ಪಡೆದ ರೈತರು ಕೇವಲ ಶೇ 8ರಷ್ಟು ಮಂದಿ ಮಾತ್ರ. ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ₹ 50 ಸಾವಿರ ಕೃಷಿ ಸಾಲ ಮನ್ನಾ ಮಾಡಿದ್ದಾರೆ. ವಾಣಿಜ್ಯ ಬ್ಯಾಂಕುಗಳಲ್ಲಿ ರಾಜ್ಯದ ರೈತರ ₹ 41 ಸಾವಿರ ಕೋಟಿ  ಸಾಲ ಇದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಸಾಲ ಮನ್ನಾ ಮಾಡಿಸಲಿ’ ಎಂದು ಆಗ್ರಹಿಸಿದರು.

ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಮಾತ ನಾಡಿ, ‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಕಳೆದ ನಾಲ್ಕು ವರ್ಷದಲ್ಲಿ ಆರ್ಥಿಕವಾಗಿ ಸದೃಢವಾಗಿದೆ. 400 ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ಗಳ ಮೂಲಕ ರೈತರಿಗೆ ಸಾಲಸೌಲಭ್ಯ ನೀಡಿದೆ. ಮುಂದಿನ ದಿನಗಳಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ₹ 100 ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದೆ’ ಎಂದರು.

‘ತಾಲ್ಲೂಕಿನಲ್ಲಿ ಅಗತ್ಯವಿರುವ ಗ್ರಾಮಗಳಲ್ಲಿ ನೂತನ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್  ಸ್ಥಾಪಿಸಲಾ ಗುವುದು’ ಎಂದರು.  102 ಸ್ವ ಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಯಿತು. 

     ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಉಪಾಧ್ಯಕ್ಷ ಎಚ್.ವಿ. ನಾಗರಾಜ್, ನಿರ್ದೇಶಕರಾದ ಮರಳೂರು ಹನುಮಂತರೆಡ್ಡಿ, ಜೆ.ವಿ. ಹನುಮೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಪ್ಪರೆಡ್ಡಿ, ಎಪಿಎಂಸಿ ಅಧ್ಯಕ್ಷ ಬೊಮ್ಮಣ್ಣ , ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್.ವಿ. ಮಂಜುನಾಥ್, ಪ್ರಮೀಳಾ ಪ್ರಕಾಶ್ ರೆಡ್ಡಿ, ಡಿ.ನರಸಿಂಹಮೂರ್ತಿ, ಅರುಂಧತಿ, ಸಹಕಾರಿ ಅಭಿವೃದ್ಧಿ ಅಧಿಕಾರಿ ಲಿಯಾಖತ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಮಹಮದ್ ಅಸ್ಲಾಂ  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.