ADVERTISEMENT

ತಾಲ್ಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಆರೋಪ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2017, 9:01 IST
Last Updated 10 ಮಾರ್ಚ್ 2017, 9:01 IST
ಚಿಕ್ಕಬಳ್ಳಾಪುರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು
ಚಿಕ್ಕಬಳ್ಳಾಪುರದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು   

ಚಿಕ್ಕಬಳ್ಳಾಪುರ: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್‌ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಉಪ ವಿಭಾಗಾಧಿಕಾರಿ ಶಿವಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ‘ಬಯಲು ಸೀಮೆಯ ಜಿಲ್ಲೆಗಳು ಸತತ ಬರಗಾಲದಿಂದ ಕಂಗೆಟ್ಟು ಹೋಗಿವೆ. ಇಂತಹ ಸಂದರ್ಭದಲ್ಲಿ ಬರ ಪರಿಹಾರಕ್ಕೆ ತುರ್ತಾಗಿ ಕಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವಲ್ಲಿ ಮಗ್ನವಾಗಿದೆ. ಜನರ ಕಷ್ಟಗಳನ್ನು ಆಲಿಸದ ಸರ್ಕಾರದ ಧೋರಣೆಯನ್ನು ಖಂಡಿಸುತ್ತೇವೆ’ ಎಂದರು.

‘ಜನರು ಬರಗಾಲದಿಂದ ಕೆಲಸ ಹುಡುಕಿಕೊಂಡು ವಲಸೆ ಹೋಗುತ್ತಿದ್ದಾರೆ. ಜನರ ಕಷ್ಟಸುಖ ಆಲಿಸಬೇಕಾದ ಅಧಿಕಾರಿಗಳು ಮಾತ್ರ ಅಧಿಕಾರದ ಸುಪ್ಪತ್ತಿಗೆ ಬಿಟ್ಟು ಹೊರ ಬರುತ್ತಿಲ್ಲ. ಬರಪೀಡಿತ ಜಿಲ್ಲೆಗಳ ಪ್ರವಾಸ ಮಾಡಬೇಕಾದ ಉಸ್ತುವಾರಿ ಸಚಿವರು ತಮ್ಮ ಕರ್ತವ್ಯವನ್ನು ಸಂಪೂರ್ಣ ಮರೆತಿದ್ದಾರೆ’ ಎಂದು ಕಿಡಿಕಾರಿದರು.

‘ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಸ್ಥಿತಿ ಗಂಭೀರವಾಗಿದೆ. ಈ ಭಾಗದ ರೈತರು ನೀರಿಲ್ಲದೆ ಕಂಗೆಟ್ಟಿದ್ದಾರೆ. ಆದರೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಈವರೆಗೆ ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿಲ್ಲ. ರೈತಪರ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಯಾರ ಪರ ಎನ್ನುವುದು ತಿಳಿಯದಾಗಿದೆ’ ಎಂದರು.

‘ರಾಜ್ಯದ 160 ತಾಲ್ಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿದೆ. ಕೇಂದ್ರದಿಂದ ಬಂದಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಜನರ ಕಷ್ಟಗಳನ್ನು ಹೀಗೆ ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

‘ನೀರಿನ ಅಭಾವದಿಂದ ರೈತರು ದನಕರು ಸಾಕಲಾಗದೆ ಕಸಾಯಿ ಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಈ ಕೂಡಲೇ ಮೇವಿನ ಬ್ಯಾಂಕ್‌ಗಳು ಮತ್ತು ಗೋಶಾಲೆಗಳನ್ನು ತೆರೆದು ಗೋವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಸೂಕ್ತ ಬೆಳೆ ಪರಿಹಾರವನ್ನು ನೀಡಬೇಕು’ ಎಂದರು.

‘ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಬರಗಾಲ ನಿರ್ವಹಣೆಯ ಮೇಲ್ವಿಚಾರಣೆ ನಡೆಸಬೇಕು. ಗೋವುಗಳಿಗೆ ಮೇವು ಒದಗಿಸಲು ಜಿಲ್ಲಾಧಿಕಾರಿಗಳು ಈ ಕೂಡಲೆ ಹಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮೈಲಪ್ಪನಹಳ್ಳಿ ಕೃಷ್ಣಮೂರ್ತಿ,  ಮುಖಂಡರಾದ ಸುಬ್ಬರಾಜು, ಪ್ರೇಮಲೀಲಾ ವೆಂಕಟೇಶ್, ಕೆ.ಎಸ್.ಕೃಷ್ಣಮೂರ್ತಿ, ಲಕ್ಷ್ಮಿನಾರಾಯಣ ಗುಪ್ತಾ,  ಕೃಷ್ಣಾರೆಡ್ಡಿ, ಕಲಾ ನಾಗರಾಜ್ ಇದ್ದರು.

*
ಜಿಲ್ಲಾಡಳಿತದ ಅಧಿಕಾರಿಗಳು ಹಳ್ಳಿಗಳ ಮಟ್ಟಕ್ಕೆ ಹೋಗಿ ಬರ ಪರಿಸ್ಥಿತಿ ಅವಲೋಕಿಸುತ್ತಿಲ್ಲ. ಕಾಟಾಚಾರಕ್ಕೆ ಸಭೆಗೆ ಬರುವ ಉಸ್ತುವಾರಿ ಸಚಿವರಿಗೆ ರೈತರ ಸಮಸ್ಯೆ ಆಲಿಸಲು ಸಮಯವಿಲ್ಲ.
-ಅಗಲಗುರ್ಕಿ ಚಂದ್ರಶೇಖರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT